ಸಾಮಾಜಿಕ ಜಾಲತಾಣದಲ್ಲಿ ಯುವಕನೊಬ್ಬ ಪ್ರಚೋದನಕಾರಿ ಪೋಸ್ಟ್ ಹಾಕಿದ್ದರಿಂದ ಕಲ್ಲು ತೂರಾಟ, ಹೊಡೆದಾಟ ನಡೆದಿದ್ದು, ಹಳೇ ಹುಬ್ಭಳ್ಳಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಉದ್ರಿಕ್ತರ ಗುಂಪು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದು, ನಂತರ ಬಸ್ಸು ಮತ್ತು ಮತ್ತಿತರ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಘಟನೆಯಲ್ಲಿ ಇನ್ಸ್ ಪೆಕ್ಟರ್ ಸೇರಿ ಇಬ್ಬರು ಪೊಲೀಸರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ಹಾಗೂ ಅಶ್ರುವಾಯು ಪ್ರಯೋಗ ಮಾಡಿದ್ದಾರೆ. ತಡರಾತ್ರಿ 1 ಗಂಟೆವರೆಗೂ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯ ಹಿಂಬಾಗದ ಪ್ರದೇಶದಲ್ಲಿ ಕಿಡಿಕೇಡಿಗಳು ಕಲ್ಲುತೂರಾಟ ನಡೆಸಿ ಪ್ರತಿಭಟನೆ ಮುಂದುವರಿಸಿದ್ದರು. ಪರಿಸ್ಥಿತಿ ಕೈಮೀರುವ ಸೂಕ್ಷ್ಮತೆ ಅರಿತ ಅಧಿಕಾರಿಗಳು ನಗರದಲ್ಲಿ ಸೆಕ್ಷನ್ 144 ಜಾರಿ ಮಾಡಿದ್ದಾರೆ.
ಏನಿದು ಪೋಸ್ಟ್?
ಮಸೀದಿಯ ಚಿತ್ರದ ಮೇಲೆ ಭಗವಾಧ್ವಜ ಹಾರಿಸಿದ ಚಿತ್ರ ಎಡಿಟ್ ಮಾಡಿ ಯುವಕನೊಬ್ಬ ತಲೆ ಕೆಟ್ಟರೆ ಇಲ್ಲೂ ಭಗವಾಧ್ವಜ ಹಾರಿಸುವೆ, ಜೈ ಶ್ರೀರಾಮ್, ಹಿಂದೂ ಸಾಮ್ರಾಟ್‘ ಎಂದು ಚಿತ್ರದ ಮೇಲೆ ಬರೆದಿರುವ ಸಾಮಾಜಿಕ ಜಾಲತಾಣದಲ್ಲಿ ಸ್ಟೇಟಸ್ ಹಾಕಿಕೊಂಡಿದ್ದ.
ವಿಷಯ ತಿಳಿದ ಮುಸಲ್ಮಾನರು ಆತನನ್ನು ಬಂಧಿಸುವಂತೆ ಹಳೆ ಹುಬ್ಬಳ್ಳಿ ಪೊಲೀಸರಿಗೆ ತಿಳಿಸಿದ್ದಾರೆ. ಯುವಕನನ್ನು ಪೊಲೀಸರು ಬಂಧಿಸಿ ಠಾಣೆಗೆ ಕರೆತಂದಿದ್ದಾರೆ. ಕೆಲವರು ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಗೆ ರಾತ್ರಿ ಮುತ್ತಿಗೆ ಹಾಕಿದ್ದಾರೆ. ಯುವಕನನ್ನು ಬಂಧಿಸಬೇಕು, ವಶಕ್ಕೆ ನೀಡಬೇಕೆಂದು ಆಗ್ರಹಿಸಿದರು. ಇದರಂತೆ ಪೊಲೀಸರು ಯುವಕನನ್ನು ಬಂಧಿಸಿದ್ದಾರೆ. ಆದರೆ ಅಷ್ಟರಲ್ಲಿಯೇ ಹಳೇ ಹುಬ್ಬಳ್ಳಿ, ಹಾಗೂ ಇನ್ನಿತರ ಪ್ರದೇಶಕ್ಕೆ ಪ್ರತಿಭಟನೆ ವ್ಯಾಪಿಸಿತು. ಅದು ಪರಿಸ್ಥಿತಿ ಉದ್ವಿಗ್ನಗೊಳ್ಳುವಂತೆ ಮಾಡಿತ್ತು.
ಹಿಂಸಾಚಾರ ಹಿನ್ನೆಲೆಯಲ್ಲಿ ನಗರದ ಪ್ರಮುಖ ಧಾರ್ಮಿಕ ಸ್ಥಳಗಳ ಎದುರು ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಭಾನುವಾರ ಹೊರ ಜಿಲ್ಲೆಗಳಿಂದಲೂ ಹೆಚ್ಚುವರಿ ಪೊಲೀಸ್ ಸಿಬ್ಬಂದಿ ಕರೆಸಿಕೊಳ್ಳಲು ಪೊಲೀಸ್ ಇಲಾಖೆ ನಿರ್ಧರಿಸಿದೆ. ಮುಂಜಾಗ್ರತಾ ಕ್ರಮವಾಗಿ ಭದ್ರಾವತಿಯ ಕ್ಷಿಪ್ರ ಕಾರ್ಯಾಚರಣೆ ಪಡೆಯನ್ನು ಕರೆಸಿಕೊಳ್ಳಲು ಪೊಲೀಸ್ ಇಲಾಖೆ ಮುಂದಾಗಿದೆ. ಭಾನುವಾರ ರಜೆ ಮೇಲೆ ಹೋದ ಸಿಬ್ಬಂದಿಗೂ ಕರ್ತವ್ಯಕ್ಕೆ ಮರಳಲು ಸೂಚಿಸಿದ್ದಾರೆ.