ಮರಾಠ ಮೀಸಲಾತಿಗಾಗಿ ಆಗ್ರಹಿಸಿ ಮಹಾರಾಷ್ಟ್ರದ ಜಲ್ನಾದಲ್ಲಿ ನಡೆಯುತ್ತಿದ್ದ ಸತ್ಯಾಗ್ರಹ ಹಿಂಸಾಸ್ವರೂಪ ಪಡೆದುಕೊಂಡಿದ್ದು, ಪೊಲೀಸರು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ.
ಮರಾಠ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಒತ್ತಾಯಿಸಿ ಮನೋಜ್ ಜಾರಂಗೆ ನೇತೃತ್ವದಲ್ಲಿ ಜಲ್ನಾದ ಅಂತರವಾಲಿ ಸಾರಥಿ ಎಂಬ ಗ್ರಾಮದಲ್ಲಿ ಮಂಗಳವಾರದಿಂದ ಉಪವಾಸ ಸತ್ಯಾಗ್ರಹ ನಡೆಯುತ್ತಿತ್ತು. ವೈದ್ಯರ ಸಲಹೆ ಮೇರೆಗೆ ಜಾರಂಗೆ ಅವರನ್ನು ಆಸ್ಪತ್ರೆಗೆ ದಾಖಲಿಸಲು ಪೊಲೀಸರು ಪ್ರಯತ್ನಿಸಿದ್ದು, ಈ ವೇಳೆ ಪ್ರತಿಭಟನಾಕಾರರು ಘರ್ಷಣೆಗೆ ಇಳಿದಿದ್ದಾರೆ.
ಪೊಲೀಸರ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ಆರಂಭಿಸಿದ್ದು, ಹಲವು ಪೊಲೀಸರಿಗೆ ಗಾಯಗಳಾಗಿವೆ. ಕೆಲವರು ರಾಜ್ಯ ಸಾರಿಗೆ ಬಸ್‌ಗಳು ಮತ್ತು ಖಾಸಗಿ ವಾಹನಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದು, ಈ ಸಂಘರ್ಷದಲ್ಲಿ ಕರ್ನಾಟಕದ ಕೆಸ್‌ಆರ್‌ಟಿಸಿ ಬಸ್ ಗೆ ಬೆಂಕಿ ಹಚ್ಚಲಾಗಿದೆ.
ಹಿಂಸಾಚಾರವನ್ನು ನಿಗ್ರಹಿಸಲು ಹಾಗೂ ಗಲಭೆಕೋರರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಬಾರದಿದ್ದಾಗ ಆಶ್ರುವಾಯು ಸಿಡಿಸಿದ್ದಾರೆ.
ಗಾಳಿಯಲ್ಲಿ ಕೆಲವು ಸುತ್ತು ಗುಂಡುಗಳನ್ನೂ ಹಾರಿಸಲಾಗಿದೆ ಎಂದು ಗ್ರಾಮಸ್ಥರು ಹೇಳಿದ್ದರಾದರೂ, ಅಧಿಕಾರಿಗಳು ಈ ಬಗ್ಗೆ ಯಾವುದೇ ಖಚಿತ ಮಾಹಿತಿಯನ್ನು ನೀಡಿಲ್ಲ.
ಹಿಂಸಾಚಾರದಲ್ಲಿ ಭಾಗಿಯಾದ ಆರೋಪದ ಮೇಲೆ 300 ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಶಾಂತಿ ಕಾಪಾಡುವಂತೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಮನವಿ ಮಾಡಿದ್ದು, ಹಿಂಸಾಚಾರದ ಬಗ್ಗೆ ಉನ್ನತ ಮಟ್ಟದ ತನಿಖೆಗಾಗಿ ಸಮಿತಿಯನ್ನು ರಚಿಸಲಾಗುವುದು ಎಂದು ತಿಳಿಸಿದ್ದಾರೆ. ಮರಾಠಾ ಸಮುದಾಯಕ್ಕೆ ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ಬದ್ಧ, ಯಾರೂ ಹಿಂಸಾಚಾರಕ್ಕೆ ಮುಂದಾಗಬಾರದು ಎಂದು ಅವರು ಹೇಳಿದ್ದಾರೆ.
ಪ್ರತಿಭಟನಾಕಾರರ ಮೇಲೆ ಬಲಪ್ರಯೋಗ ಮಾಡಿರುವುದನ್ನು ಪ್ರತಿಪಕ್ಷಗಳು ಖಂಡಿಸಿವೆ.