ಬೆಳಗಾವಿ : ರಾಜ್ಯ ಸರ್ಕಾರದ ಕನ್ನಡ ಪರ ನಿಲುವಿಗೆ ಅನುಗುಣವಾಗಿ, ಸರ್ಕಾರಿ ಕಚೇರಿಗಳು ಹಾಗೂ ವಾಣಿಜ್ಯ ಸಂಸ್ಥೆಗಳಲ್ಲಿ ಕನ್ನಡ ನಾಮಫಲಕಗಳ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ, ಉಲ್ಲಂಘನೆ ಕಂಡುಬಂದಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ನಗರಾಭಿವೃದ್ದಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.

ನಗರದ ಸಮಗ್ರ ಅಭಿವೃದ್ಧಿ ಹಾಗೂ ಸಾರ್ವಜನಿಕರಿಗೆ ಗುಣಮಟ್ಟದ ನಾಗರಿಕ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಇಲ್ಲಿನ ಸುವರ್ಣ ವಿಧಾನಸೌಧದ ಕೊಠಡಿ ಸಂಖ್ಯೆ 354ರಲ್ಲಿ ಮಹಾನಗರ ಪಾಲಿಕೆ, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ (BUDA) ಹಾಗೂ ಸ್ಮಾರ್ಟ್ ಸಿಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ನಗರದ ಸಾರ್ವಜನಿಕ ಶೌಚಾಲಯಗಳು ದಿನದ ಎಲ್ಲ ಸಮಯದಲ್ಲೂ ಸಾರ್ವಜನಿಕರ ಬಳಕೆಗೆ ಮುಕ್ತವಾಗಿರಬೇಕು. ಅವುಗಳ ಸ್ವಚ್ಛತೆ, ನೈರ್ಮಲ್ಯ ಹಾಗೂ ನಿರ್ವಹಣೆಗೆ ಮೊದಲ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ನಗರದ ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಹಕಾರದೊಂದಿಗೆ ಬೆಳಗಾವಿಯನ್ನು ಮಾದರಿ ನಗರವನ್ನಾಗಿ ರೂಪಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ನಗರದಲ್ಲಿ ಬಾಕಿ ಉಳಿದಿರುವ ಹಳೆಯ ಘನತ್ಯಾಜ್ಯ (Legacy Waste) ನಿರ್ವಹಣೆಯನ್ನು ತ್ವರಿತಗೊಳಿಸಿ ಪರಿಸರ ಸ್ನೇಹಿ ರೀತಿಯಲ್ಲಿ ವಿಲೇವಾರಿ ಮಾಡಬೇಕು. ಜೊತೆಗೆ ಹಾಳಾಗಿರುವ ರಸ್ತೆಗಳನ್ನು ಆದ್ಯತೆಯ ಮೇರೆಗೆ ದುರಸ್ತಿಗೊಳಿಸಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದ್ದಾರೆ.
ಇದನ್ನೂ ಓದಿ : Narendra Modi : ಈ ವಾರವೇ ಮೈಸೂರಿಗೆ ಪ್ರಧಾನಿ ಮೋದಿ ಭೇಟಿ: ಕಾರಣವೇನು..?
ಸಭೆಯಲ್ಲಿ ವಿವಿಧ ನಗರಾಭಿವೃದ್ಧಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ಯಾವುದೇ ಕಾಮಗಾರಿಗಳು ಅನಗತ್ಯವಾಗಿ ವಿಳಂಬವಾಗದಂತೆ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಈ ವೇಳೆ ಬೆಳಗಾವಿ ವಿಧಾನಸಭಾ ಕ್ಷೇತ್ರದ ಶಾಸಕ ಆಸೀಫ್ ರಾಜ ಶೇಠ್, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ (BUDA) ಅಧ್ಯಕ್ಷ ಲಕ್ಷ್ಮಣರಾವ್ ಜಿಂಗಳೆ, ಬೆಳಗಾವಿ ಮಹಾನಗರ ಪಾಲಿಕೆಯ ಮಹಾಪೌರರಾದ ಪ್ರೀತಿ ಕಾಮ್ಕರ್, ಉಪ ಮಹಾಪೌರ ಹಣಮಂತ ಕೊಂಗಾಲಿ, ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತ ಕಾರ್ತಿಕ್, ಬೆಳಗಾವಿ ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕಿ ಕವಿತಾ ವಾರಂಗಲ್, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಶಕೀಲ್ ಅಹ್ಮದ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.






