ರಾಜ್ಯದ ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಹಿಜಾಬ್ ಧರಿಸಿರುವ ವಿದ್ಯಾರ್ಥಿನಿಯರಿಗೆ ಕಾಲೇಜು ತರಗತಿಗಳಿಗೆ ಹಾಜರಾಗಲು ಬಿಡದಿರುವುದು ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಇದೀಗ ಉಡುಪಿ ಜಿಲ್ಲೆಯ ಆರ್.ಎನ್.ಎಸ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಕಾಲೇಜಿಗೆ ಏಕಾಏಕಿ ರಜೆಯನ್ನು ಘೋಷಿಸಿರುವುದನ್ನು ಖಂಡಿಸಿ ಕೇಸರಿ ಶಾಲು ಧರಿಸಿ ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುತ್ತಾ ಶಾಸ್ತ್ರಿ ವೃತ್ತದವರೆಗೆ ಮೆರವಣಿಗೆ ನಡೆಸಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ವಿದ್ಯಾರ್ಥಿಗಳನ್ನು ಚದುರಿಸಿ ಮನೆಗೆ ಕಳುಹಿಸಿದ್ದಾರೆ.
ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಮುಸ್ಲಿಂ ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಪ್ರತ್ಯೇಕವಾಗಿ ನಿಂತಿರುವುದು ಕಾಣಬಹುದು. ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರು ಇತ್ತೀಚಿಗೆ ನಡೆದ ಘಟನೆಯನ್ನು ಖಂಡಿಸಿ ನ್ಯಾಯಾಕ್ಕಾಗಿ ಘೋಷಣೆಗಳನ್ನು ಕೂಗುತ್ತಿದ್ದರು. ಇತ್ತ ಕೇಸರಿ ಶಾಲುಗಳನ್ನು ಧರಿಸಿದ ವಿದ್ಯಾರ್ಥಿಗಳು ಜೈ ಶ್ರೀ ರಾಮ್ ಎಂದು ಘೋಷಣೆಗಳನ್ನು ಕೂಗುತ್ತಿದ್ದರು.

ಇತ್ತ ಉಡುಪಿಯ ಭಂಡಾರ್ಕರ್ ಕಾಲೇಜಿನ ವಿದ್ಯಾರ್ಥಿಗಳು ಕೇಸರಿ ಶಾಲನ್ನು ಧರಿಸಿ ಜಾಥಾ ನಡೆಸಿದ್ದರು. ಆದರೆ, ವಿದ್ಯಾರ್ಥಿಗಳನ್ನು ಕಾಲೇಜಿನ ಆವರಣದಲ್ಲೇ ತಡೆದ ಪ್ರಾಂಶುಪಾಲರು ಕೇಸರಿ ಶಾಲನ್ನು ತೆಗೆದಿಟ್ಟು ತರಗತಿಗಳಿಗೆ ಹಾಜರಾಗುವಂತೆ ಸೂಚಿಸಿದರು. ಹಿಜಾಬ್ ಧರಿಸುವ ವಿದ್ಯಾರ್ಥಿನಿಯರ ಗೈರು ಹಾಜರಾತಿ ಮುಂದುವರೆಯಿತು. ಬೈಂದೂರಿನ ನಾವುಂದದ ಶಾಲೆಯಲ್ಲು ಸಹ ವಿದ್ಯಾರ್ಥಿಗಳು ಕೇಸರಿ ಶಾಲನ್ನು ಧರಿಸಿ ಶಾಲೆಗೆ ಆಗಮಿಸಿದ್ದನ್ನು ಗಮನಿಸಿದ ಶಿಕ್ಷಕರು ಈ ಕುರಿತು ಸಭೆ ನಡೆಸಿದ್ದರು.
ಇದೀಗ ಈ ಸುದ್ದು ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದ್ದು ರಾಜಕೀಯ ಪಕ್ಷಗಳು ಪರಸ್ಪರ ಆರೋಪ ಮತ್ತು ಪ್ರತ್ಯಾರೋಪಗಳಲ್ಲಿ ತೊಡಗಿವೆ. ಮುಂದಿನ ದಿನಗಳಲ್ಲಿ ಈ ವಿಚಾರ ಎಲ್ಲಿಗೆ ಬಂದು ನಿಲ್ಲುತ್ತದೆ ಎಂದಬುದನ್ನ ಕಾದು ನೋಡಬೇಕಿದೆ.