ಕಳೆದು ಒಂದು ದಿನದಲ್ಲಿ ಚಾಮರಾಜನಗರ ಜಿಲ್ಲೆಯೊಂದರಲ್ಲೇ 24 ರೋಗಿಗಳು ಆಮ್ಲಜನಕ ಸಿಗದೆ ಸಾವಿಗೀಡಾಗಿದ್ದಾರೆ. ಕೇವಲ 3 ಜನ ಮಾತ್ರ ಆಮ್ಲಜನಕ ಸಿಗದೆ ಸಾವಿಗೀಡಾಗಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿರುವುದು ಶುದ್ಧ ಸುಳ್ಳು ಎಂದು ವಿರೋಧ ನಾಯಕ ಸಿದ್ದರಾಮಯ್ಯ ಸುಧಾಕರ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿರುವ ರೋಗಿಗಳ ಸಂಖ್ಯೆಗನುಗುಣವಾಗಿ ಪ್ರತಿನಿತ್ಯ ಕನಿಷ್ಟ 350 ಆಕ್ಸಿಜನ್ ಸಿಲಿಂಡರ್ ಅಗತ್ಯವಿದೆ, ಆದರೆ ಕಳೆದ ಭಾನುವಾರ ಸರಬರಾಜು ಆದದ್ದು ಕೇವಲ 126 ಸಿಲಿಂಡರ್. ಹೀಗಾಗಿ ಸಂಜೆಯ ವೇಳೆಗೆ ಆಸ್ಪತ್ರೆಯಲ್ಲಿದ್ದ ಆಕ್ಸಿಜನ್ ಖಾಲಿಯಾಗಿ ರೋಗಿಗಳು ಸಾವಿಗೀಡಾಗಿದ್ದಾರೆ. ಇಂದು ಚಾಮರಾಜನಗರ ಜಿಲ್ಲಾಧಿಕಾರಿಗಳು ಹಾಗೂ ವೈದ್ಯಾಧಿಕಾರಿಗಳೊಂದಿಗಿನ ಸಭೆಯಲ್ಲಿ ಈ ಬಗ್ಗೆ ನಾನು ಪ್ರಶ್ನಿಸಿದಾಗ “ರೋಗಿಗಳ ಸಾವಿಗೆ ಆಕ್ಸಿಜನ್ ಕೊರತೆಯೇ ಕಾರಣ, ನಾವು ಆಕ್ಸಿಜನ್ ವ್ಯವಸ್ಥೆ ಮಾಡುವ ಎಷ್ಟೇ ಪ್ರಯತ್ನ ಮಾಡಿದರೂ ಅದರಿಂದ ಪ್ರಯೋಜನವಾಗಿಲ್ಲ” ಎಂಬ ಸತ್ಯಸಂಗತಿಯನ್ನು ಅಧಿಕಾರಿಗಳು ಹೇಳಿದ್ದಾರೆ. ಇದಕ್ಕೆ ಸಚಿವ ಸುಧಾಕರ್ ಏನಂತಾರೆ..? ಎಂದು ಪ್ರಶ್ನೆ ಮಾಡಿದ್ದಾರೆ.
ಸರ್ಕಾರಿ ಆಸ್ಪತ್ರೆಗಳಿಗೆ ಅಗತ್ಯವಿರುವ ಆಕ್ಸಿಜನ್, ಬೆಡ್‌ಗಳು, ವೈದ್ಯರು ಸೇರಿದಂತೆ ವಿವಿಧ ವೈದ್ಯಕೀಯ ಸವಲತ್ತುಗಳನ್ನು ಪೂರೈಕೆ ಮಾಡಬೇಕಾದುದ್ದು ರಾಜ್ಯ ಸರ್ಕಾರದ ಜವಾಬ್ದಾರಿ, ಈ ಜವಾಬ್ದಾರಿಯನ್ನು ನಿಭಾಯಿಸುವಲ್ಲಿ ಯಡಿಯೂರಪ್ಪ ಸರ್ಕಾರ ವಿಫಲವಾಗಿರುವುದೇ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿನ ರೋಗಿಗಳ ಸಾವಿಗೆ ಕಾರಣ ಎಂದು ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ.
ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿನ ರೋಗಿಗಳ ಸಾವಿಗೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾಧಿಕಾರಿ, ಚಾಮರಾಜನಗರ ಜಿಲ್ಲಾಧಿಕಾರಿ ಹಾಗೂ ಆರೋಗ್ಯ ಸಚಿವರು ಈ ಮೂವರ ಹೇಳಿಕೆಗಳು ಭಿನ್ನವಾಗಿವೆ. ಹಾಗಾಗಿ ಸತ್ಯ ಯಾವುದು..? ಸುಳ್ಳು ಯಾವುದು..? ಎಂದು ಜನರಿಗೆ ತಿಳಿಯಬೇಕಾದರೆ ಈ ಬಗ್ಗೆ ಸಮಗ್ರ ತನಿಖೆಯಾಗಬೇಕೆಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಮತ್ತು ದುರಂತದಲ್ಲಿ ಸಾವಿಗೀಡಾದವರ ಆತ್ಮಕ್ಕೆ ಶಾಂತಿ ಸಿಗಬೇಕು ಎಂದಾದರೆ ಘಟನೆಗೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆಯಾಗಬೇಕು ಎಂದು ಸರ್ಕಾರವನ್ನು ಆಗ್ರಹಿಸುತ್ತೇನೆ. ಸ್ವತಂತ್ರ ತನಿಖಾಸಂಸ್ಥೆಯಿಂದ ತನಿಖೆಯಾಗದ ಹೊರತು ಸತ್ಯಾಸತ್ಯತೆ ಹೊರಬರುವ ವಿಶ್ವಾಸವಿಲ್ಲ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ತಮ್ಮ ಬೇಜವಾಬ್ದಾರಿಯಿಂದ 24 ಜನ ರೋಗಿಗಳ ಸಾವಿಗೆ ಕಾರಣರಾದ ಮುಖ್ಯಮಂತ್ರಿ ಯಡಿಯೂರಪ್ಪ, ಆರೋಗ್ಯ ಸಚಿವ ಸುಧಾಕರ್, ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಘಟನೆಯ ನೈತಿಕ ಹೊಣೆಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ. ಇವರಿಗೆ ಮಾನ ಮರ್ಯಾದಿಯಿದ್ದರೆ ತಮ್ಮ ಹುದ್ದೆಯಲ್ಲಿ ಒಂದು ಕ್ಷಣವೂ ಮುಂದುವರೆಯಲಾರರು ಎಂದು ಚಾಟಿಬೀಸಿದ್ದಾರೆ.

ಕೊರೊನಾ ಎರಡನೇ ಅಲೆ ಆರಂಭವಾಗಿ ಇಷ್ಟು ದಿನಗಳಾಯಿತು, ಚಾಮರಾಜನಗರದ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಈವರೆಗೆ ಕೋವಿಡ್ ನಿರ್ವಹಣೆ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿಲ್ಲ, ಜಿಲ್ಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿಲ್ಲ. ಇವರು ಎಚ್ಚರವಾಗೋಕೆ ಇನ್ನೆಷ್ಟು ಅಮಾಯಕರು ಸಾಯಬೇಕೆಂದು ಪ್ರಶ್ನಿಸಿದ್ದಾರೆ.
ಘಟನೆಯಲ್ಲಿ ಸಾವಿಗೀಡಾದವರಲ್ಲಿ ಬಹುತೇಕರು ಬಡವರು, ಕುಟುಂಬಕ್ಕೆ ಆಧಾರವಾಗಿದ್ದವರು, ಯುವಕರೇ ಆಗಿದ್ದಾರೆ. ಸರ್ಕಾರದ ಬೇಜವಾಬ್ದಾರಿಗೆ ಇಂದು ಅನೇಕ ಕುಟುಂಬಗಳು ಬೀದಿಪಾಲಾಗಿವೆ. ಹಾಗಾಗಿ ಮೃತ ರೋಗಿಗಳ ಕುಟುಂಬಕ್ಕೆ ತಲಾ ರೂ.25 ಲಕ್ಷ ಪರಿಹಾರವನ್ನು ಈ ಕೂಡಲೇ ರಾಜ್ಯ ಸರ್ಕಾರ ನೀಡಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.












