ಮಂಡ್ಯ ಸಂಸದೆ ಸುಮಲತಾ ನಡೆ ಬಗ್ಗೆ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿಸಿದೆ. ಈ ಎಲ್ಲ ಚರ್ಚೆಗೆ ತೆರೆ ಎಳೆಯಲು ಸುಮಲತಾ ಮುಂದಾಗಿದ್ದಾರೆ. ಇಂದಿನ ಸಭೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಸುಮಲತಾ ಇಂದು ನಿರ್ಧಾರ ತಿಳಿಸುವುದಾಗಿ ಹೇಳಿದ್ದಾರೆ.
ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನಾನು ಕಳೆದ ಬಾರಿ ಐತಿಹಾಸಿಕ ಗೆಲುವು ಸಾಧಿಸಿದ ನಂತರ, ಈ ಕ್ಷೇತ್ರದ ಬಗ್ಗೆ ರಾಷ್ಟ್ರೀಯ ಮಟ್ಟದಲ್ಲಿ ಭಾರೀ ಚರ್ಚೆ ಆಗುತ್ತಿದೆ. ಈ ಸಲದ ಲೋಕಸಭೆ ಚುನಾವಣೆಯಲ್ಲೂ ಅದೇ ರೀತಿಯ ಚರ್ಚೆಯನ್ನು ಹುಟ್ಟು ಹಾಕಿದೆ. ಈಗಾಗಲೇ ರಾಜಕೀಯ ಪಲ್ಲಟಕ್ಕೆ ಮಂಡ್ಯ ಲೋಕಸಭಾ ಕ್ಷೇತ್ರ ಸಾಕ್ಷಿಯಾಗಿದೆ. ಚುನಾವಣೆಗೆ ಸ್ಪರ್ಧಿಸುವ ಕುರಿತಂತೆ ನನ್ನ ನಿಲುವಿಗಾಗಿ ಅನೇಕರು ಕಾಯುತ್ತಿದ್ದಾರೆ. ಮಂಡ್ಯಗಾಗಿ, ನನ್ನ ಮಂಡ್ಯದ ಸ್ವಾಭಿಮಾನಿಗಳ ಸೇವೆಗೆ ಯಾವತ್ತಿಗೂ ನಾವು ಬದ್ಧ ಎಂದಿದ್ದಾರೆ.
![](https://pratidhvani.com/wp-content/uploads/2024/04/IMG-20240402-WA0046-1024x682.jpg)
ಇಂದು ಬೆಳಗ್ಗೆ 10 ಗಂಟೆಗೆ ಕಾಳಿಕಾಂಬಾ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ನಂತರ ದೇವಸ್ಥಾನದ ಆವರಣದಲ್ಲೇ ನನ್ನ ನಿಲುವನ್ನು ಸ್ಪಷ್ಟಪಡಿಸುತ್ತಿದ್ದೇನೆ ಎಂದಿರುವ ಸುಮಲತಾ, ಬಹುಮುಖ್ಯ ಘೋಷಣೆ ವೇಳೆ ನಮ್ಮೊಂದಿಗೆ ನಮ್ಮೆಲ್ಲರ ಪ್ರೀತಿಯ ನಟ ದರ್ಶನ್, ಅಭಿಷೇಕ್ ಅಂಬರೀಶ್ ಇರಲಿದ್ದಾರೆ. ಬನ್ನಿ, ಜೊತೆಯಾಗಿ ಮಂಡ್ಯವನ್ನು ಮತ್ತಷ್ಟು ಅಭಿವೃದ್ದಿ ಪಡಿಸೋಣ ಎಂದು ಅಭಿಮಾನಿಗಳಿಗೆ ಕರೆ ನೀಡಿದ್ದಾರೆ.