ಕರ್ನಾಟಕಕ್ಕೆ ಕೇಂದ್ರದಿಂದ ಆಕ್ಸಿಜನ್ ಪೂರೈಕೆ ಹೆಚ್ಚಳ ವಿಚಾರ, ಸುಪ್ರೀಂ ಕೋರ್ಟ್ ನೀಡಿರುವ ಆದೇಶ ರಾಜ್ಯದ ಸಹಸ್ರಾರು ರೋಗಿಗಳ ಪ್ರಾಣವನ್ನು ಉಳಿಸಿದೆ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹಾಗೆಯೇ ಕೇಂದ್ರ ಸರ್ಕಾರದ ನಡೆಯನ್ನು ಟೀಕಿಸಿದ್ದಾರೆ.
ನಮ್ಮ ರಾಜ್ಯಕ್ಕೆ 1200 ಮೆಟ್ರಿಕ್ ಟನ್ ಆಮ್ಲಜನಕ ಪೂರೈಸುವಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶದ ವಿರುದ್ಧ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟಿನ ಆದೇಶವನ್ನು ನಾಡಿನ ನೊಂದ ಜನರೆಲ್ಲರ ಪರವಾಗಿ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ.
ಸುಪ್ರೀಂ ಕೋರ್ಟ್ ತಪರಾಕಿಯಿಂದ ಕೇಂದ್ರದ ಮೋದಿ ಸರ್ಕಾರ ಈಗಲಾದರೂ ಬುದ್ದಿ ಕಲಿಯಲಿ. ಜನರ ಪ್ರಾಣದ ಜೊತೆ ಚೆಲ್ಲಾಟವಾಡುವ ಕ್ರೌರ್ಯವನ್ನು ನಿಲ್ಲಿಸಲಿ. ಕರ್ನಾಟಕಕ್ಕೆ ಅಗತ್ಯವಿರುವಷ್ಟು ಪ್ರಮಾಣದ ಆಮ್ಲಜನಕವನ್ನು ತಕ್ಷಣ ಪೂರೈಸಲಿ ಎಂದು ಒತ್ತಾಯಿಸಿದ್ದಾರೆ.
ಕರ್ನಾಟಕಕ್ಕೆ ನಿತ್ಯ 1600 – 1700 ಮೆಟ್ರಿಕ್ ಟನ್ ಆಮ್ಲಜನಕದ ಅಗತ್ಯವಿದೆ, ಆದರೆ ಕೇಂದ್ರ ಸರ್ಕಾರ ನಿಗದಿ ಮಾಡಿದ್ದು 965 ಮೆಟ್ರಿಕ್ ಟನ್ ಮಾತ್ರ. ಇದರಿಂದ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆಯಿಂದ ಪ್ರಾಣ ಕಳೆದುಕೊಳ್ಳಲಿದ್ದ ರಾಜ್ಯದ ಸಹಸ್ರಾರು ರೋಗಿಗಳ ಪ್ರಾಣವನ್ನು ಸುಪ್ರೀಂ ಕೋರ್ಟ್ ಉಳಿಸಿದೆ. ರಾಜ್ಯದಲ್ಲಿ ಉತ್ಪಾದನೆಯಾಗುವ ಆಕ್ಸಿಜನ್ ಅನ್ನು ಸಂಪೂರ್ಣ ಇಲ್ಲಿಯೇ ಬಳಕೆ ಮಾಡಿಕೊಳ್ಳಲು ಅವಕಾಶ ನೀಡುವಂತೆ ಹಾಗೂ ರಾಜ್ಯಕ್ಕೆ ನೀಡುವ ಆಕ್ಸಿಜನ್ ಪ್ರಮಾಣವನ್ನು 1500 ಮೆಟ್ರಿಕ್ ಟನ್ ಗೆ ಹೆಚ್ಚಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ರಾಜ್ಯ ಬಿಜೆಪಿ ಸಂಸದರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.