
ಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ
ಕೊಪ್ಪಳ, ಅಕ್ಟೋಬರ್ 6 : ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ ಪ್ರಶ್ನೆಯಿಲ್ಲ. ಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಮೇಲ್ಜಾತಿಗಳನ್ನು ತುಳಿಯಲು ಸಮೀಕ್ಷೆ ನಡೆಸಲಾಗುತ್ತಿದೆ ಎಂಬ ಕೇಂದ್ರ ಸಚಿವ ಸೋಮಣ್ಣ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನು ನಡೆಸದಿದ್ದರೆ, ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ. ಈ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ ಪ್ರಶ್ನೆಯಿಲ್ಲ. ಸಮಸಮಾಜ ನಿರ್ಮಾಣವನ್ನು ವಿರೋಧಿಸುವವರು ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಜನರ ದಾರಿ ತಪ್ಪಿಸುತ್ತಿದ್ದಾರೆ. ಈಗಾಗಲೇ 1.10 ಕೋಟಿ ಕುಟುಂಬಗಳ ಸಮೀಕ್ಷಾ ಕಾರ್ಯ ಮುಗಿದಿದ್ದು, ನಿನ್ನೆವರೆಗೆ ಶೇ.63 ರಷ್ಟು ಸರ್ವೇ ಕಾರ್ಯ ಪ್ರಗತಿಯಾಗಿದೆ. ನಾಳೆ ಸಂಜೆವರೆಗೆ ಸಮೀಕ್ಷೆಯ ಪ್ರಗತಿಯನ್ನು ಪರಿಶೀಲಿಸಿ, ಸಮೀಕ್ಷೆ ಅವಧಿ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಕೊಪ್ಪಳದಲ್ಲಿ ಶೇ.97ರಷ್ಟು ಸಮೀಕ್ಷೆ ಪೂರ್ಣ
ಕೊಪ್ಪಳ ಜಿ್ಲ್ಲೆಯಲ್ಲಿ ಶೇ.97 ರಷ್ಟು ಸಮೀಕ್ಷೆ ಪೂರ್ಣಗೊಂಡಿದ್ದು, ಸಮಾಜದಲ್ಲಿ ಬದಲಾವಣೆಯನ್ನು ವಿರೋಧಿಸುವವರು ಸಮೀಕ್ಷೆಯ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ ಎಂದರು.
ಕೊಪ್ಪಳದಲ್ಲಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದಾ, ಕಡಿಮೆ ಅಂತರದಲ್ಲಿ ಸೋತಿದ್ದರೂ, ಕೊಪ್ಪಳದ ಜನ ತನ್ನನ್ನು ಆಶೀರ್ವದಿಸಿದ್ದರು ಎಂದು ಸ್ಮರಿಸಿದ ಮುಖ್ಯಮಂತ್ರಿಗಳು ಜನತೆಗೆ ಧನ್ಯವಾದಗಳನ್ನು ತಿಳಿಸಿದರು.
