ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು ಈ ಕುರಿತು ಶಿಕ್ಷಣ ಸಚಿವ ಬಿಸಿ ನಾಗೇಶ್ ಮಹತ್ವದ ಮಾಹಿತಿ ನೀಡಿದ್ದಾರೆ.
ಹೌದು, 2021-22ರ ಶೈಕ್ಷಣಿಕ ವರ್ಷದಲ್ಲಿ ಒಟ್ಟು 15,000 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ತೀರ್ಮಾನಿಸಲಾಗಿದ್ದು, ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಕಳೆದ ಎರಡು ವರ್ಷಗಳಿಂದ ನೂರಾರು ಶಿಕ್ಷಕರು ನಿವೃತ್ತಿಯಾಗಿದ್ದು ಆ ಜಾಗಕ್ಕೆ ಹೊಸದಾಗಿ ನೇಮಕಾತಿಯಾಗಬೇಕಿದೆ. ಇನ್ನು ಹಲವೆಡೆ ಶಿಕ್ಷಕರ ಕೊರತೆಯಿದ್ದು ಅದನ್ನು ನೀಗಿಸಲು ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ತಾತ್ಕಾಲಿಕವಾಗಿ 23,078 ಅತಿಥಿ ಶಿಕ್ಷಕರ ನೇಮಕಕ್ಕೆ ಈಗಾಗಲೇ ಆದೇಶ ಹೊರಡಿಸಲಾಗಿದೆ. ಇದರ ಜೊತೆಗೆ ಹೆಚ್ಚುವರಿ 4,000 ಅತಿಥಿ ಉಪನ್ಯಾಸಕರಿಂದ ಸೇವೆ ಪಡೆದುಕೊಳ್ಳಲು ನಿರ್ಧರಿಸಲಾಗಿದೆ.
ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ ಪದವೀಧರ ಪ್ರಾಥಮಿಕ ಶಾಲಾ (6 ರಿಂದ 8 ) ಶಿಕ್ಷಕರ 10 ಸಾವಿರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು.
ಕಲ್ಯಾಣ ಕರ್ನಾಟಕ ವೃಂದದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ 5 ಸಾವಿರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ.
ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 18,000 ಅತಿಥಿ ಶಿಕ್ಷಕರು ಮತ್ತು ಪ್ರೌಢ ಶಾಲೆಗಳಿಗೆ 5,078 ಅತಿಥಿ ಶಿಕ್ಷಕರ ನೇಮಕ ಮಾಡಿಕೊಳ್ಳಲಾಗುತ್ತದೆ. ಈ ಸಂಬಂಧ ನವೆಂಬರ್ 4ರಂದು ಆದೇಶ ಹೊರಡಿಸಲಾಗಿದ್ದು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಮ್ಮ ಟ್ವಿಟರ್ ಖಾತೆಯಲ್ಲಿ ತಿಳಿಸಿದ್ದಾರೆ.