ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಎಲ್ಲವೂ ಸುಸೂತ್ರವಾಗಿ ಆಗುತ್ತಿದ್ದು, ಎಲ್ಲವೂ ಒಂದು ಹಂತಕ್ಕೆ ಬರಲಿದೆ ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಹೇಳಿದ್ದಾರೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹೈಕಮಾಂಡ್ ಸರಿಯಾದ ಸಮಯದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.

ಇನ್ನು ರಾಜ್ಯದ ಸಿಎಂ ಬದಲಾವಣೆ ವಿಚಾರವಾಗಿ ನೀವು ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದೀರಾ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು,ʼ ನನ್ನ ಖಾಸಗಿ ಭೇಟಿ ಬಗ್ಗೆ ಎಲ್ಲವನ್ನೂ ಬಹಿರಂಗವಾಗಿ ಹೇಳಲು ಆಗುವುದಿಲ್ಲ. ಉಪಾಹಾರ ಕೂಟ ನಡೆದಿದ್ದು, ಮಂಗಳವಾರವೂ ಒಂದು ಉಪಾಹಾರಕೂಟ ನಡೆಯಲಿದೆʼ ಎಂದರು.

ಸ್ವಾಮೀಜಿಗಳು ರಾಜಕೀಯದಲ್ಲಿ ಹಸ್ತಕ್ಷೇಪ ಮಾಡಬಾರದು ಎನ್ನುವ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಇದಕ್ಕೆ ರಾಜಕೀಯವಾಗಿ ಉತ್ತರ ಕೊಡುವುದಕ್ಕಿಂತ, ಯಾರು ಯಾವ ಸಂದರ್ಭದಲ್ಲಿ ಮಠವನ್ನು ಹೇಗೆ ಬಳಸಿಕೊಂಡಿದ್ದಾರೆ ಎಂಬುದು ಜನರಿಗೆ ಗೊತ್ತಿದ್ದು, ನಾನು ಹೆಚ್ಚಾಗಿ ಹೇಳುವ ಅಗತ್ಯವಿಲ್ಲ ಎಂದು ವ್ಯಂಗ್ಯವಾಗಿ ಹೇಳಿದರು.











