ಬೆಂಗಳೂರು: ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಕಲ್ಪಿಸುವುದಾಗಿ ವಿದ್ಯಾರ್ಥಿಗಳಿಗೆ ಆಮಿಷವೊಡ್ಡಿ, ನಕಲಿ ಅಂಕಪಟ್ಟಿಗಳನ್ನು ಸೃಷ್ಟಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಭೇದಿಸಿದ್ದಾರೆ. ಪ್ರಕರಣ ಸಂಬಂಧ ಕೋರಮಂಗಲ ಮೂಲದ ಡಿಜಿಟಲ್ ಡಿಸ್ಟೆನ್ಸ್ ಎಜುಕೇಷನ್ ಮಿಷನ್ ಸಂಸ್ಥೆಯ ಮಾಲೀಕ ರಾಜಾರೆಡ್ಡಿಯನ್ನು ಬಂಧಿಸಲಾಗಿದೆ.
ಪ್ರಕರಣದಲ್ಲಿ ಭಾಗಿಯಾಗಿರುವ ಮತ್ತೊಬ್ಬ ಆರೋಪಿ ಆರ್ಯನ್ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

ಆರೋಪಿಗಳು ಡಿಜಿಟಲ್ ಡಿಸ್ಟೆನ್ಸ್ ಎಜುಕೇಷನ್ ಹೆಸರಿನಲ್ಲಿ ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆಗಳ ಸಂಗ್ರಹಣೆ ಮಾಡಿ, ಸಂಸ್ಥೆಯ ಸಿಬ್ಬಂದಿಗಳ ಮೂಲಕ ಕರೆ ಮಾಡಿ ನಗರದ ಫ್ಲಾರೆನ್ಸ್, ಕಲಾನಿಕೇತನ, ಎಂವಿಜೆ, ಟಿಪ್ಪು ಸುಲ್ತಾನ್ ಸೇರಿದಂತೆ ವಿವಿಧ ಕಾಲೇಜುಗಳಲ್ಲಿ ಪ್ರವೇಶ ದೊರಕಿಸಿಕೊಡುವುದಾಗಿ ನಂಬಿಸುತ್ತಿದ್ದರು.ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಶಿಕ್ಷಣ ಪೂರ್ಣಗೊಳಿಸದವರಿಗೂ ನೇರವಾಗಿ ಪದವಿ ಕೋರ್ಸ್‌ಗಳಿಗೆ ಪ್ರವೇಶ ಕಲ್ಪಿಸುವುದಾಗಿ ಭರವಸೆ ನೀಡುತ್ತಿದ್ದರು. ಇದನ್ನು ನಂಬಿದ ವಿದ್ಯಾರ್ಥಿಗಳಿಗೆ ನಕಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಅಂಕಪಟ್ಟಿಗಳನ್ನು ಸೃಷ್ಟಿಸಿ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ.

ಈ ಕುರಿತು ದೊರೆತ ಮಾಹಿತಿಯ ಆಧಾರದ ಮೇಲೆ ಸಿಸಿಬಿಯ ವಿಶೇಷ ತನಿಖಾ ದಳ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದೆ.ವಿಚಾರಣೆ ವೇಳೆ ರಾಜಾರೆಡ್ಡಿ, ಆರ್ಯನ್ ಮೂಲಕ ನಕಲಿ ಅಂಕಪಟ್ಟಿಗಳನ್ನು ತಯಾರಿಸಿ ಕೊರಿಯರ್ ಮೂಲಕ ವಿದ್ಯಾರ್ಥಿಗಳ ಮನೆಗಳಿಗೆ ಕಳುಹಿಸುತ್ತಿದ್ದ ಎಂಬುದು ಬೆಳಕಿಗೆ ಬಂದಿದೆ. ಒಂದು ನಕಲಿ ಅಂಕಪಟ್ಟಿಗೆ ₹30 ಸಾವಿರದಿಂದ ₹50 ಸಾವಿರದವರೆಗೆ ಹಣ ವಸೂಲಿ ಮಾಡಲಾಗುತ್ತಿತ್ತು.
ಈವರೆಗೆ 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ನಕಲಿ ಅಂಕಪಟ್ಟಿಗಳನ್ನು ಮಾರಾಟ ಮಾಡಿ ಲಕ್ಷಾಂತರ ರೂಪಾಯಿ ಹಣ ಸಂಪಾದಿಸಿರುವುದು ತನಿಖೆಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.






