ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ತೀವ್ರಗೊಳ್ಳುತ್ತಿದ್ದಂತೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಬೆಂಬಲಿಗರು ರಾಜ್ಯದ ವಿವಿಧ ಭಾಗಗಳಲ್ಲಿ ಸಂಭ್ರಮಾಚರಣೆ ಆರಂಭಿಸಿದ್ದಾರೆ. ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಆಯ್ಕೆ ಆಗಲಿದ್ದಾರೆ ಎಂಬ ಊಹಾಪೋಹಗಳ ನಡುವೆ ಹಲವೆಡೆ ಪಟಾಕಿ ಸಿಡಿಸಿ, ಸಿಹಿ ಹಂಚಿ ಕಾರ್ಯಕರ್ತರು ಸಂಭ್ರಮಿಸಿದ್ದಾರೆ.

ರಾಮನಗರ, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಡಿಕೆ ಶಿವಕುಮಾರ್ ಪರ ಘೋಷಣೆಗಳು ಕೇಳಿಬಂದಿದ್ದು, “2023ರ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಲು ಡಿಕೆಶಿಯವರ ಸಂಘಟನೆ ಶಕ್ತಿ ಪ್ರಮುಖ ಕಾರಣ” ಎಂದು ಅವರ ಬೆಂಬಲಿಗರು ಹೇಳಿಕೊಂಡಿದ್ದಾರೆ. ಇತ್ತೀಚೆಗೆ ಮುಖ್ಯಮಂತ್ರಿ ಸ್ಥಾನ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದ ಡಿಕೆ ಶಿವಕುಮಾರ್, “ಸಮಯ ಮತ್ತು ಮುಹೂರ್ತ ಉತ್ತರ ಕೊಡಲಿದೆ” ಎಂದು ಹೇಳುವ ಮೂಲಕ ಕುತೂಹಲ ಹೆಚ್ಚಿಸಿದ್ದರು. ಈ ಹೇಳಿಕೆ ಬಳಿಕ ಅವರ ಬೆಂಬಲಿಗರು ರಾಜ್ಯದಾದ್ಯಂತ ಫ್ಲೆಕ್ಸ್‌ಗಳನ್ನು ಹಾಕಿ ಡಿಕೆಶಿಗೆ ಸಿಎಂ ಸ್ಥಾನ ನೀಡಬೇಕು ಎಂಬ ಒತ್ತಾಯ ಹೆಚ್ಚಿಸಿದ್ದರು.

ಇನ್ನೊಂದೆಡೆ, ಕಾಂಗ್ರೆಸ್ ಹೈಕಮಾಂಡ್ ಡಿಕೆ ಶಿವಕುಮಾರ್ ಬಣಕ್ಕೆ ಸಾರ್ವಜನಿಕ ಹೇಳಿಕೆಗಳು ಮತ್ತು ಘೋಷಣೆಗಳನ್ನು ನಿಯಂತ್ರಣದಲ್ಲಿಡುವಂತೆ ಸೂಚನೆ ನೀಡಿದೆ ಎನ್ನಲಾಗಿದೆ. ನಾಯಕತ್ವ ಬದಲಾವಣೆ ವಿಚಾರವನ್ನು ಪಕ್ಷದ ಒಳಗೇ ಇತ್ಯರ್ಥಗೊಳಿಸುವವರೆಗೆ ಬೆಂಬಲಿಗರು ಅತಿಯಾದ ಸಂಭ್ರಮ ಅಥವಾ ಬಹಿರಂಗ ಒತ್ತಡ ತರುವಂತಿಲ್ಲ ಎಂದು ಹಿರಿಯ ನಾಯಕರು ಸೂಚಿಸಿದ್ದಾರೆ.ದೆಹಲಿಯಲ್ಲಿ ನಡೆದ ಸಭೆಗಳ ಬಳಿಕ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಉಪಹಾರ ಕೂಟವೂ ರಾಜಕೀಯ ಕುತೂಹಲಕ್ಕೆ ಕಾರಣವಾಗಿದ್ದು, ರಾಜ್ಯ ರಾಜಕಾರಣದಲ್ಲಿ ಮುಂದಿನ ಬೆಳವಣಿಗೆಗಳತ್ತ ಎಲ್ಲರ ಗಮನ ನೆಟ್ಟಿದೆ.





