
ರಾಜ್ಯದಲ್ಲಿ ವಿರೋಧ ಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿರುವ ಕಾಂಗ್ರೆಸ್ ಸರ್ಕಾರ ಹಗರಣದ ಸೇಡಿನಲ್ಲಿ ಒದ್ದಾಡುತ್ತಿದೆ. ವಾಲ್ಮೀಕಿ ನಿಗಮದಿಂದ ತೆಲಂಗಾಣದ ಖಾಸಗಿ ಅಕೌಂಟ್ ನಂಬರ್‌ಗೆ ಹಣ ವರ್ಗಾವಣೆ ಸೇರಿದಂತೆ ಮುಡಾದಲ್ಲಿ ಸಿಎಂ ಸಿದ್ದರಾಮಯು್ಯ ಪತ್ನಿಗೆ ಸೈಟ್ ಪಡೆದಿರುವುದು ಅಕ್ರಮ ಎನ್ನುವುದು ವಿರೋಧ ಪಕ್ಷಗಳ ಆರೋಪ. ಇದೀಗ ಆಗಸ್ಟ್ 3ರಿಂದ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಈ ಬಗ್ಗೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ, ಚರ್ಚೆ ನಡೆಸಿದ್ದಾರೆ. ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಸಂಘಟನೆ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಈ ಸಭೆಯಲ್ಲಿ ಉಪಸ್ಥಿತರಿದ್ದರು.
ವಾಲ್ಮೀಕಿ ಹಗರಣ ಹಾಗು ಮುಡಾ ಹಗರಣದ ಬಗ್ಗೆ ರಾಜ್ಯದಲ್ಲಿ ಬಿಜೆಪಿ, ಜೆಡಿಎಸ್ ಪಕ್ಷಗಳು ಮುಗಿಬೀಳುತ್ತಿರುವ ಬಗ್ಗೆ ನಾಯಕರ ಜೊತೆಗೆ ಚರ್ಚೆ ನಡೆಸಿದ್ದು, ವಿರೋಧ ಪಕ್ಷಗಳನ್ನು ಎದುರಿಸಲು ಮಾಡಬೇಕಿರುವ ಕಾರ್ಯತಂತ್ರಗಳ ಬಗ್ಗೆ ಸಮಾಲೋಚನೆ ಮಾಡಲಾಗಿದೆ. ಪಕ್ಷ ಸಂಘಟನೆ ಬದಲಾವಣೆ, ಸಚಿವ ಸಂಪುಟ ವಿಸ್ತರಣೆ ಕುರಿತು ಸಭೆಯಲ್ಲಿ ಚರ್ಚೆ ನಡೆದಿದೆ ಎನ್ನಲಾಗ್ತಿದೆ. ಪ್ರಮುಖವಾಗಿ ವಿರೋಧ ಪಕ್ಷಗಳ ಹೋರಾಟವನ್ನು ಹತ್ತಿಕ್ಕುವುದು ಹೇಗೆ..? ಸರ್ಕಾರಕ್ಕೆ ಎದುರಾಗಿರುವ ಗಂಡಾಂತರದಿಂದ ಹೊರ ಬರುವ ಬಗ್ಗೆ ಚರ್ಚೆ ಮಾಡಲಾಗಿದೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ.

ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಸಭೆಯ ಬಳಿಕ ಸಿಎಂ ಸಿದ್ದರಾಮಯ್ಯ ಮಾತನಾಡಿ, ಪಕ್ಷದ ವರಿಷ್ಠರ ಜೊತೆಗೆ ಚರ್ಚೆ ಮಾಡಿದ್ದೇವೆ. ರಾಜ್ಯ ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚೆಯಾಗಿದೆ. ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಸೇಡಿನ ರಾಜಕಾರಣ ಮಾಡುತ್ತಿವೆ. ವಾಲ್ಮೀಕಿ ಹಗರಣದಲ್ಲಿ ನನ್ನನ್ನು ಟಾರ್ಗೆಟ್ ಮಾಡ್ತಿದ್ದಾರೆ. ಎಸ್‌ಟಿ ಜನರಿಗೆ ಅನ್ಯಾಯ ಆಗಿದೆ ಅಂತ ಹೇಳಲು ಪ್ರಯತ್ನ ಮಾಡ್ತಿದ್ದಾರೆ. ಮುಡಾ ಹಗರಣ ಅಲ್ಲ, ಅಲ್ಲಿ ಎಲ್ಲವೂ ಕಾನೂನು ಬದ್ಧವಾಗಿ ನಡೆದಿದೆ. ಇದನ್ನೆಲ್ಲ ಹೈಕಮಾಂಡ್‌ಗೆ ವಿವರಣೆ ಕೊಡೋಕೆ ಬಂದಿದ್ದೆವು. ಎರಡು ವಿಷಯಗಳ ಬಗ್ಗೆ ಮನವರಿಕೆ ಮಾಡಿದ್ದೇವೆ ಎಂದಿದ್ದಾರೆ.
ನಾವು ತಪ್ಪು ಮಾಡದೆ ಇದ್ದರೂ ವಿರೋಧ ಪಕ್ಷಗಳ ನಾಯಕರು ಆರೋಪ ಮಾಡ್ತಿದ್ದಾರೆ. ಹಾಗಾಗಿ ಸಹಾಯಕ್ಕೆ ಬರಬೇಕು ಎಂದು ವರಿಷ್ಠರಲ್ಲಿ ಕೇಳಿದ್ದೇವೆ. ಬಜೆಟ್ ಬಗ್ಗೆಯೂ ಚರ್ಚೆ ಆಗಿದೆ. ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅನ್ಯಾಯ ಮಾಡಿದೆ. ಕರ್ನಾಟಕಕ್ಕೆ ಅನುಕೂಲ ಮಾಡಿಕೊಟ್ಟಿಲ್ಲ. ಈ ವಿಚಾರವನ್ನ ಕೂಡ ಹೈಕಮಾಂಡ್‌ಗೆ ಹೇಳಿದ್ದೇವೆ ಎಂದಿದ್ದಾರೆ ಸಿಎಂ ಸಿದ್ದರಾಮಯ್ಯ. ಒಟ್ಟಾರೆ ವಾಲ್ಮೀಕಿ ಹಗರಣದಲ್ಲಿ 97 ಕೋಟಿ ರೂಪಾಯಿ ಹಣವನ್ನು ವರ್ಗಾವಣೆ ಹಾಗು ಮುಡಾ ಹಗರಣದಲ್ಲಿ 14 ಸೈಟ್‌ಗಳನ್ನು ಪಡೆದಿರುವ ಬಗ್ಗೆ ಸಂಪೂರ್ಣ ಮಾಹಿತಿ ಕೊಟ್ಟಿದ್ದು, ಕಾಂಗ್ರೆಸ್ ಪಕ್ಷ ಇದರಲ್ಲಿ ಪಾಲುದಾರ ಅಲ್ಲ ಎಂದು ಹೈಕಮಾಂಡ್‌ಗೆ ಮಾಹಿತಿ ನೀಡಿದ್ದಾರೆ.
ಕೃಷ್ಣಮಣಿ