ಬೆಂಗಳೂರು : ಕರ್ನಾಟಕದಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮೂರು ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ರಾಜ್ಯದಿಂದ ಸ್ಪರ್ಧಿಸಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಪಕ್ಷದ ಮಾಧ್ಯಮ ವಕ್ತಾರ ಪವನ್ ಖೇರಾ ಹಾಗೂ ಎಐಸಿಸಿ ಕಾರ್ಯದರ್ಶಿ ಮನ್ಸೂರ್ ಅಲಿಖಾನ್ ಇವರುಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಕುರಿತು ಅಧಿಕೃತವಾಗಿ ಚುನಾವಣಾಧಿಕಾರಿ ವಿಶಾಲಾಕ್ಷಿ ಘೋಷಣೆ ಮಾಡಿದ್ದಾರೆ.

ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಭೋಸರಾಜು ಸೋಮಯ್ಯ ಅವರ ನಾಮಪತ್ರ ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ಕಣದಲ್ಲಿದ್ದ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೂವರು ಕಾಂಗ್ರೆಸ್ ಅಭ್ಯರ್ಥಿಗಳಾದರೆ ಬಿಜೆಪಿಯಿಂದ ಎಂ. ನಾಗರಾಜು ರಾಜ್ಯಸಭೆಗೆ ಆಯ್ಕಯಾಗಿದ್ದಾರೆ.
ಪವನ್ ಖೇರಾ, ಮನ್ಸೂರ್ ಅಲಿಖಾನ್ ಹಾಗೂ ಪ್ರೊ. ನಾಗರಾಜ್ ಚುನಾವಣಾಧಿಕಾರಿಗಳಿಂದ ಪ್ರಮಾಣ ಪತ್ರ ಪಡೆದುಕೊಂಡಿದ್ದಾರೆ. ಖರ್ಗೆ ಅವರು ದೆಹಲಿಯಲ್ಲಿರುವ ಕಾರಣ ಬೆಂಗಳೂರಿಗೆ ವಾಪಸ್ ಆದ ಬಳಿಕ ಪ್ರಮಾಣ ಪತ್ರ ಪಡೆದುಕೊಳ್ಳಲಿದ್ದಾರೆ
ಹಾಲಿ ರಾಜ್ಯಸಭಾ ಸದಸ್ಯರಾಗಿದ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ, ಬಿಜೆಪಿಯ ಈರಣ್ಣ ಕಡಾಡಿ ಹಾಗೂ ನಾರಾಯಣ ಸಾ ಬಾಂಡಗೆ ಅವರ ಅಧಿಕಾರ ಅವಧಿ ಈ ತಿಂಗಳ ಅಂತ್ಯಕ್ಕೆ ಮುಕ್ತಾಯವಾಗಿತ್ತು. ತೆರವಾದ ಸ್ಥಾನಗಳಿಗೆ ಭಾರತೀಯ ಚುನಾವಣಾ ಆಯೋಗ ದ್ವೈವಾರ್ಷಿಕ ಚುನಾವಣೆಯನ್ನು ಘೋಷಣೆ ಮಾಡಿತ್ತು.






