ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟಕ್ಕೆ 19 ಮಂದಿ ಸಚಿವರು ಸೋಮವಾರ ಪ್ರಮಾಣವಚನ ಸ್ವೀಕರಿಸಿದ್ದು, ಕೊನೆಯ ಕ್ಷಣದಲ್ಲಿ ಎಂಎಲ್‌ಸಿ ಗಾಯತ್ರಿ ಶಾಂತೇಗೌಡ ಅವರ ಪ್ರಮಾಣವಚನ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಒಂದು ಸಚಿವ ಸ್ಥಾನ ಇನ್ನೂ ಖಾಲಿಯಾಗಿದೆ. ಇದರಿಂದ ಕಾಂಗ್ರೆಸ್‌ನಲ್ಲಿ ಆ ಒಂದು ಸ್ಥಾನಕ್ಕಾಗಿ ಮಹಿಳಾ ಶಾಸಕರು ಹಾಗೂ ಎಂಎಲ್‌ಸಿಗಳ ನಡುವೆ ತೀವ್ರ ಪೈಪೋಟಿ ಆರಂಭವಾಗಿದೆ.

ಕಾಂಗ್ರೆಸ್ ಹೈಕಮಾಂಡ್ ಪ್ರಕಟಿಸಿದ್ದ ಮೊದಲ ಪಟ್ಟಿಯಲ್ಲಿ ಗಾಯತ್ರಿ ಶಾಂತೇಗೌಡ ಅವರ ಹೆಸರೂ ಸೇರಿದ್ದರೂ, ಅಂತಿಮ ಕ್ಷಣದಲ್ಲಿ ಅವರು ಪ್ರಮಾಣವಚನ ಸ್ವೀಕರಿಸಲಿಲ್ಲ. ಇದೀಗ ಸಚಿವ ಸ್ಥಾನ ಪಡೆಯುವ ನಿಟ್ಟಿನಲ್ಲಿ ಅವರು ಮತ್ತೆ ಚಟುವಟಿಕೆ ಆರಂಭಿಸಿದ್ದು, ವಿಧಾನಸೌಧದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.ಈ ಒಂದು ಸಚಿವ ಸ್ಥಾನಕ್ಕಾಗಿ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ, ಎಂಎಲ್‌ಸಿ ಉಮಾಶ್ರೀ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಸಂಡೂರು ಶಾಸಕಿ ಅನ್ನಪೂರ್ಣ ತುಕಾರಾಂ ಹಾಗೂ ಗಾಯತ್ರಿ ಶಾಂತೇಗೌಡ ಪ್ರಮುಖ ಆಕಾಂಕ್ಷಿಗಳಾಗಿದ್ದಾರೆ.

ಸಿಎಂ ಅವರನ್ನು ಭೇಟಿಯಾದ ಬಳಿಕ ಪ್ರತಿಕ್ರಿಯಿಸಿದ ನಯನಾ ಮೋಟಮ್ಮ, “ಚಿಕ್ಕಮಗಳೂರು ಜಿಲ್ಲೆಯ ಐದು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲುವು ಸಾಧಿಸಿದೆ. ಮಹಿಳೆಯರಿಗೆ ಸೂಕ್ತ ಪ್ರಾತಿನಿಧ್ಯ ನೀಡಬೇಕು. ಅವಕಾಶ ಸಿಕ್ಕರೆ ಸಚಿವೆಯಾಗಿ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುತ್ತೇನೆ” ಎಂದು ಹೇಳಿದರು.
ಇನ್ನೊಂದೆಡೆ ಎಂಎಲ್‌ಸಿ ಉಮಾಶ್ರೀ, “ನಾನು ಸಚಿವ ಸ್ಥಾನದ ಆಕಾಂಕ್ಷಿಯಾಗಿರುವುದು ನಿಜ. ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದೇನೆ. ಹೈಕಮಾಂಡ್ ನನ್ನ ಸೇವೆಯನ್ನು ಪರಿಗಣಿಸಿ ಸೂಕ್ತ ತೀರ್ಮಾನ ಕೈಗೊಳ್ಳುವ ವಿಶ್ವಾಸವಿದೆ” ಎಂದು ತಿಳಿಸಿದ್ದಾರೆ.

ಈ ನಡುವೆ ಶಾಸಕಿ ಅನ್ನಪೂರ್ಣ ತುಕಾರಾಂ ಅವರು ತಮ್ಮ ಪತಿಯೊಂದಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿರುವುದು ಸಚಿವ ಸ್ಥಾನಕ್ಕಾಗಿ ನಡೆಯುತ್ತಿರುವ ಪೈಪೋಟಿಯನ್ನು ಮತ್ತಷ್ಟು ತೀವ್ರಗೊಳಿಸಿದೆ. ಕಾಂಗ್ರೆಸ್ ಹೈಕಮಾಂಡ್ ಅಂತಿಮವಾಗಿ ಯಾರಿಗೆ ಅವಕಾಶ ನೀಡಲಿದೆ ಎಂಬುದರ ಬಗ್ಗೆ ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಾಗಿದೆ.






