ನವದೆಹಲಿ: ತಿರುಪತಿ ಲಡ್ಡುವಿನಲ್ಲಿ ಪ್ರಾಣಿಯ ಕೊಬ್ಬಿನಾಂಶ ಪತ್ತೆಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಈ ಬಗ್ಗೆ ತನಿಖೆ ನಡೆಸಬೇಕು ಎಂದು ಮನವಿ ಮಾಡಿ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಕೋರ್ಟ್ ಇಂದು ಕೈಗೆತ್ತಿಕೊಳ್ಳಲಿದೆ.
ಈ ವಿವಾದದ ಬಗ್ಗೆ ಕಳೆದ ವಾರ ಸೆಪ್ಟೆಂಬರ್ 30ರಂದು ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ತಿರುಪತಿ ಲಡ್ಡು ವಿವಾದದ ಕುರಿತು ತನಿಖೆ ನಡೆಸಲು ಆಂಧ್ರ ಸರ್ಕಾರ ಎಸ್‌ಐಟಿ ರಚಿಸಿದ್ದು,ಈ ತನಿಖಾ ತಂಡ ಮುಂದುವರಿಯಬೇಕೇ ಅಥವಾ ಬೇರೆ ಸ್ವತಂತ್ರ ಸಂಸ್ಥೆಯಿಂದ ತನಿಖೆ ನಡೆಸಬೇಕೇ ಎಂಬುದನ್ನು ಇಂದು ಸುಪ್ರೀಂ ಕೋರ್ಟ್ ನಿರ್ಧರಿಸಲಿದೆ.
ಈ ವಿವಾದದ ಬಗ್ಗೆ, ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬಿನ ಅಂಶ ಬಳಸಲಾಗಿದೆ ಎಂದು ಹೇಳಲು ಯಾವುದೇ ಪ್ರಬಲ ಪುರಾವೆಗಳು ಇಲ್ಲದೆಯೇ ಭಕ್ತರಲ್ಲಿ ಆತಂಕ ಮೂಡಿಸಿದ್ದಕ್ಕೆ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡುಗೆ ಸುಪ್ರೀಂ ಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿತ್ತು.