ಬೆಂಗಳೂರು (Bengaluru): ನಗರದ ಎಲ್ಲಾ ನೀರಿನ ಟ್ಯಾಂಕರ್ ಮಾಲೀಕರು ಮಾರ್ಚ್ 7 ರೊಳಗೆ ನೋಂದಣಿ ಮಾಡಿಸದಿದ್ದರೆ ಟ್ಯಾಂಕರ್ ಗಳನ್ನು ಸೀಜ್ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ಅವರು ಎಚ್ಚರಿಕೆ ನೀಡಿದರು.
ಕುಡಿಯುವ ನೀರಿನ ಸಮಸ್ಯೆ ವಿಚಾರವಾಗಿ ಬಿಬಿಎಂಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ 3,500 ಟ್ಯಾಂಕರ್ಗಳು ಇದ್ದು, ಕೇವಲ 219 ಟ್ಯಾಂಕರ್ಗಳು ಅಂದರೆ ಕೇವಲ ಶೇ. 10 ರಷ್ಟು ಮಾತ್ರ ನೋಂದಣಿ ಮಾಡಿಸಿಕೊಂಡಿವೆ. ಚಿಕ್ಕ, ದೊಡ್ಡ, ಹಾಲಿನ ಟ್ಯಾಂಕರ್ಗಳನ್ನು ಶೀಘ್ರ ಸರ್ಕಾರದ ವಶಕ್ಕೆ ಪಡೆಯಲಾಗುವುದು. ಬಿಡಬ್ಲ್ಯೂ ಎಸ್ಎಸ್ಬಿ ಅವರು 210 ಟ್ಯಾಂಕರ್ಗಳನ್ನು ಈಗಾಗಲೇ ನೀರಿನ ಪೂರೈಕೆಗೆ ಬಳಸುತ್ತಿದ್ದಾರೆ.
![](https://pratidhvani.com/wp-content/uploads/2024/03/IMG-20240304-WA0007-1024x576.jpg)
ಸಮಸ್ಯೆ ಬಗೆಹರಿಸಲು 556 ಕೋಟಿ ರೂ. ಮೀಸಲು
ಬೆಂಗಳೂರು ನಗರದ ಎಲ್ಲಾ ಶಾಸಕರಿಗೆ ನೀರಿನ ಸಮಸ್ಯೆ ಬಗೆಹರಿಸಲು 10 ಕೋಟಿ ರೂ. ಅನುದಾನ ನೀಡಲಾಗಿದೆ. ಬಿಬಿಎಂಪಿಗೆ 148 ಕೋಟಿ ರೂ., ಬಿಡಬ್ಲ್ಯೂ ಎಸ್ಎಸ್ಬಿ ಯಿಂದ 128 ಕೋಟಿ ರೂ. ಒಟ್ಟು 556 ಕೋಟಿ ರೂ. ಹಣವನ್ನು ಕುಡಿಯುವ ನೀರಿನ ಪೂರೈಕೆಗೆ ಮೀಸಲಿಡಲಾಗಿದೆ.
ನೀರಿನ ಸಮಸ್ಯೆ ಬಗೆಹರಿಸಲು ಬಿಬಿಎಂಪಿ ಸಹಾಯವಾಣಿ ಮತ್ತು ವಾರ್ಡ್ ವಾರು ದೂರು ಕೇಂದ್ರಗಳನ್ನು ತೆರೆಯಲಾಗುವುದು. ಸಮಸ್ಯೆ ಆಲಿಸಲು ವಾರ್ ರೂಂಗಳು ಕೆಲಸ ನಿರ್ವಹಿಸಲಿವೆ. ಹಿರಿಯ ಅಧಿಕಾರಿಗಳು ಸೇರಿದಂತೆ ನಾನು ಸಹ ಪದೇ, ಪದೇ ಪರಿಶೀಲನೆ ನಡೆಸುತ್ತೇನೆ.
![](https://pratidhvani.com/wp-content/uploads/2024/03/IMG-20240304-WA0009-1024x886.jpg)
ನೀರು ಸರ್ಕಾರಕ್ಕೆ ಸೇರಿದ್ದು. ಯಾವುದೇ ವೈಯಕ್ತಿಕ ವ್ಯಕ್ತಿಗೆ ಸೇರಿದ್ದಲ್ಲ. ಯಾವ ನೀರನ್ನು ಬೇಕಾದರೂ ನಿಯಂತ್ರಣಕ್ಕೆ ತೆಗೆದುಕೊಳ್ಳುವ ಹಕ್ಕು ಸರ್ಕಾರಕ್ಕೆ ಇದೆ. ಬೆಂಗಳೂರು ಹೊರವಲಯದಲ್ಲಿ ಅಂತರ್ಜಲ ನೀರಿನ ಮಟ್ಟ ಹೆಚ್ಚಿರುವ ಕಡೆಯಿಂದಲೂ ನೀರಿನ ಪೂರೈಕೆ ಮಾಡಲು ಸಿದ್ಧರಾಗಿ ಇರಬೇಕು ಎಂದು ಅಧಿಕಾರಿಗಳಿಗೆ ತಿಳಿಸಲಾಗಿದೆ. ನೀರಿನ ಸಮಸ್ಯೆ ಬಗೆಹರಿಸಲು ಚುನಾವಣಾ ನೀತಿ ಸಂಹಿತೆ ಅಡ್ಡ ಬರುವುದಿಲ್ಲ.
ಕುಡಿಯುವ ನೀರನ್ನು ಪೂರೈಕೆ ಮಾಡುವುದು ಸರ್ಕಾರದ ಜವಾಬ್ದಾರಿ. ಬೆಂಗಳೂರಿನ ಜನತೆ ಗಾಬರಿಯಾಗುವುದು ಬೇಡ. ಪ್ರತಿಯೊಬ್ಬರಿಗೂ ನೀರು ನೀಡುವುದು ನಮ್ಮ ಕರ್ತವ್ಯ.
#karnataka #bengaluru #water #waterproblem #dkshivakumar