ಕೋವಿಡ್ ಹರಡುವಿಕೆಯನ್ನು ತಡೆಗಟ್ಟುವ ಉದ್ದೇಶದಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದ ಉದ್ಯೋಗ ಖಾತ್ರಿ ಯೋಜನೆಯನ್ನು ಪುನಾರಂಭಿಸಲು ಸೂಚನೆ ನೀಡಲಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗಾವಕಾಶಗಳು ಕಡಿಮೆಯಾಗಿರುವುದನ್ನು ಮನಗಂಡು ಸರ್ಕಾರ ನರೇಗಾ ಯೋಜನೆಯನ್ನು ಪುನಾರಂಭಿಸಲು ನಿರ್ಧರಿಸಿದೆ. ಸರ್ಕಾರ ಉದ್ಯೋಗ ಖಾತ್ರಿ ಯೋಜನೆ ಅನುಷ್ಟಾನ ಕುರಿತಾಗಿ ಹೊಸ ಮಾರ್ಗಸೂಚಿ ಹೊರಡಿಸಿದೆ ಎಂದಿದ್ದಾರೆ.
ಇದರ ಪ್ರಕಾರ ಒಂದು ಸ್ಥಳದಲ್ಲಿ ಗರಿಷ್ಟ 40ಕೂಲಿ ಕಾರ್ಮಿಕರನ್ನು ಬಳಸಿಕೊಂಡು ಕಾಮಗಾರಿ ಕೈಗೊಳ್ಳಲು ಅನುಮತಿ ನೀಡಲಾಗಿದೆ. ಕೂಲಿ ಕಾರ್ಮಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಲು ತಿಳಿಸಲಾಗಿದೆ. ಕೂಲಿ ಮೊತ್ತವನ್ನು ಹೆಚ್ಚಿಸಲಾಗಿದ್ದು ಒಟ್ಟು 299 ರೂ. ನಿಗದಿಪಡಿಸಲಾಗಿದೆ ಎಂದು ಹೇಳಿದರು.