ನಿಷೇಧಾಜ್ಞೆ ಜಾರಿ ನಡುವೆಯೂ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಶನಿವಾರ ಆಂಜನೇಯಸ್ವಾಮಿ ಮೂಲ ಮಂದಿರ ಚಲೋಗೆ ಚಾಲನೆ ನೀಡಿದೆ.
ತಹಶೀಲ್ದಾರ್ ಶ್ವೇತಾ ರವೀಂದ್ರ ಶುಕ್ರವಾರ ಪಟ್ಟಣದಲ್ಲಿ ಸೆಕ್ಷನ್ 144 ಜಾರಿಗೊಳಿಸಿ ಆದೇಶ ಹೊರಡಿಸಿದ್ದು, ಜೂನ್ ೩ರ ಸಂಜೆ ೬ ಗಂಟೆಯಿಂದ ಜೂನ್ ೫ ಬೆಳಿಗ್ಗೆ ೬ ಗಂಟೆಯವರೆಗೆ ನಿಷೇದಾಜ್ಞೆ ಜಾರಿಯಲ್ಲಿರುತ್ತದೆ ಎಂದು ಸೂಚಿಸಿದ್ದಾರೆ. ಇದೇ ವೇಳೆ ಪ್ರತೀ ಶನಿವಾರ ನಡೆಯುವ ಸಂತೆಯನ್ನು ಮುಂದೂಡಿರುವುದಾಗಿ ಪುರಸಭಾ ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ.
ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕ್ರಮ ಕೈಗೊಂಡಿರುವ ಅಧಿಕಾರಿಗಳು, ಎಲ್ಲೆಡೆ ಬಿಗಿ ಭದ್ರತೆಯನ್ನು ನಿಯೋಜಿಸಿದ್ದಾರೆ. 500ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗಳನ್ನು ಭದ್ರತೆಗೆ ನಿಯೋಜಿಸಲಾಗಿದ್ದು, ನಾಲ್ಕು ಕಡೆ ಚೆಕ್ ಪೋಸ್ಟ್ ಗಳನ್ನು ಹಾಕಲಾಗಿದೆ. ಎಸ್’ಪಿ ಎನ್ ಸತೀಶ್ ಅವರ ನೇತೃತ್ವದಲ್ಲಿ ರೂಟ್ ಮಾರ್ಚ್ ಕೂಡ ನಡೆಯಲಿದೆ.
ಹಿಂದೂಪರ ಸಂಘಟನೆಗಳಿಂದ ಶ್ರೀರಂಗಪಟ್ಟಣದಲ್ಲಿ ಮೂಲ ಮಂದಿರ ಚಲೋಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಜಾಮಿಯ ಮಸೀದಿ ಸುತ್ತಲೂ ಬ್ಯಾರಿಕೇಡ್ ಅಳವಡಿಸಿ ಪೊಲೀಸರನ್ನು ಮಸೀದಿಗೆ ಕಣ್ಗಾವಲು ಹಾಕಿ ಭದ್ರತೆ ನಿಯೋಜಿಸಲಾಗಿದೆ. ಹಿಂದೂ ಸಂಘಟನೆಗಳ ಶ್ರೀರಂಗಪಟ್ಟಣ ಚಲೋಗೆ ಕಡಿವಾಣ ಹಾಕಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.