ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹೆಚ್.ಸಿ. ಬಾಲಕೃಷ್ಣ ಅವರಿಗೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್ (NBW) ಜಾರಿ ಮಾಡಿದೆ.2018ರ ವಿಧಾನಸಭಾ ಚುನಾವಣೆಯ ವೇಳೆ ಮತದಾರರಿಗೆ ಆಮಿಷ ಒಡ್ಡಿದ ಆರೋಪದಡಿ ಅವರ ವಿರುದ್ಧ ಅಬಕಾರಿ ಕಾಯ್ದೆ ಹಾಗೂ ಐಪಿಸಿ ವಿವಿಧ ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆ ಕಳೆದ ಕೆಲ ವರ್ಷಗಳಿಂದ ನಡೆಯುತ್ತಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಹಲವು ಬಾರಿ ಸಮನ್ಸ್ ಜಾರಿ ಮಾಡಿದರೂ, ಶಾಸಕ ಬಾಲಕೃಷ್ಣ ಅವರು ವಿಚಾರಣೆಗೆ ಹಾಜರಾಗದೇ ಗೈರು ಹಾಜರಾಗುತ್ತಿದ್ದರೆಂದು ತಿಳಿದುಬಂದಿದೆ. ಇದನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಲಯ, ಅವರ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿದೆ.

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಂತಹ ಪ್ರಕರಣಗಳಲ್ಲಿ ಜನಪ್ರತಿನಿಧಿಗಳು ನ್ಯಾಯಾಲಯದ ಆದೇಶಗಳನ್ನು ಪಾಲಿಸದಿದ್ದರೆ ಕಾನೂನು ಕ್ರಮ ಕಠಿಣವಾಗುತ್ತದೆ ಎಂಬುದಕ್ಕೆ ಈ ಘಟನೆ ಉದಾಹರಣೆಯಾಗಿದೆ.






