ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕುಟುಂಬ ರಾಜಕಾರಣಕ್ಕೆ ಹೆಚ್ಚಾಗಿ ಕೈ ಹಾಕಿತ್ತು. ಈ ಪೈಕಿ ಹೆಲವರು ಗೆದ್ದಿದ್ದರೆ, ಹಲವರು ಸೋತು ಮನೆಗೆ ನಡೆದಿದ್ದಾರೆ.
ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ (Priyanka Jarakiholi) ಮೊದಲ ಚುನಾವಣೆಯಲ್ಲೇ ಗೆಲುವು ಕಂಡಿದ್ದಾರೆ. ಬೀದರ್ ಲೋಕಸಭಾ ಕ್ಷೇತ್ರದಲ್ಲಿ 1991ರಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು ಸಾಧಿಸಿ, ಅಲ್ಲಿಂದ ಇಲ್ಲಿಯವರೆಗೂ ಸೋಲು ಕಂಡಿರಲಿಲ್ಲ. ಆದರೆ, ಸಚಿವ ಈಶ್ವರ್ ಖಂಡ್ರೆ ಪುತ್ರ ಸಾಗರ್ ಖಂಡ್ರೆ ಕಾಂಗ್ರೆಸ್ ಖಾತೆಗೆ ಗೆಲುವು ತಂದು ಕೊಟ್ಟಿದ್ದಾರೆ.
ಚಾಮರಾಜನಗರ ಕ್ಷೇತ್ರದಲ್ಲಿ ಸಚಿವ ಹೆಚ್ ಸಿ ಮಹದೇವಪ್ಪ ಅವರ ಪುತ್ರ ಸುನಿಲ್ ಬೋಸ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಎಸ್ಸಿ ಮೀಸಲು ಕ್ಷೇತ್ರವಾದ ಇಲ್ಲಿ ಬಿಜೆಪಿಯ ಅಭ್ಯರ್ಥಿ ಬಾಲರಾಜ್ ಸೋಲನುಭವಿಸಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಕಣದಲ್ಲಿದ್ದರು. ಆದರೆ, ಹಿರಿಯ ರಾಜಕಾರಣಿ ಜಗದೀಶ್ ಶೆಟ್ಟರ್ ಅವರ ವಿರುದ್ಧ ಸೋಲು ಕಂಡಿದ್ದಾರೆ.
ಬಾಗಲಕೋಟೆಯಲ್ಲಿ ಸತತ ಸೋಲಿನಿಂದಾಗಿ ಕಾಂಗ್ರೆಸ್ ಸಚಿವ ಶಿವಾನಂದ ಪಾಟೀಲ್ ಪುತ್ರಿ, ಯುವ ಮುಖ ಸಂಯಕ್ತಾ ಪಾಟೀಲ್ (Samyukta Shivanand Patil) ಅವರನ್ನು ಕಣಕ್ಕೆ ಇಳಿಸಿತ್ತು. ಆದರೆ, ಸಂಯುಕ್ತ ಸೋಲು ಅನುಭವಿಸಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಡಿಮೆ ಮತಗಳಿಂದ ಸೋತಿದ್ದ ಸಚಿವ ರಾಮಲಿಂಗಾ ರೆಡ್ಡಿ ಅವರ ಪುತ್ರಿ ಸೌಮ್ಯಾ ರೆಡ್ಡಿ ಲೋಕಸಭೆಯಲ್ಲಿ ಸ್ಪರ್ಧಿಸಿ ಸೋಲು ಕಂಡಿದ್ದಾರೆ.