ಬಾಗಲಕೋಟೆ : ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಲ್ಲಿ ಒಂದಾದ ಕೃಷ್ಣಾ ಮೇಲ್ದಂಡೆ ಯೋಜನೆಯ (UKP) 3ನೇ ಹಂತಕ್ಕೆ ತಕರಾರು ಎತ್ತಿರುವ ಹಾಗೂ ತುಂಗಭದ್ರಾ ಅಣೆಕಟ್ಟಿನ ನೀರು ಪೋಲು ತಡೆಯಲು ಸಹಕಾರ ನೀಡದಿರುವ ಆಂಧ್ರ ಪ್ರದೇಶದ ನಡೆ ವಿರುದ್ಧ ಧ್ವನಿ ಎತ್ತಲು ನಮ್ಮ ಸರ್ಕಾರ ತೀರ್ಮಾನಿಸಿದೆ ಎಂದು ಜಲಸಂಪನ್ಮೂಲ ಸಚಿವ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಜಿಲ್ಲೆಯಲ್ಲಿಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಇದಕ್ಕಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ಹಿನ್ನೆಲೆಯಲ್ಲಿ ರಾಜ್ಯದ ಸಂಸದರ ಜತೆ ದೆಹಲಿಯ ಕರ್ನಾಟಕ ಭವನದಲ್ಲಿ ಬರುವ ಮಂಗಳವಾರ ಸಭೆ ನಡೆಸಲಾಗುವುದು ಎಂದು ಹೇಳಿದ್ದಾರೆ.
ಕೃಷ್ಣಾ ಮೇಲ್ದಂಡೆ ಯೋಜನೆ ಅನುಷ್ಠಾನ ಹಾಗೂ ಭೂಸ್ವಾಧೀನ ಪ್ರಕ್ರಿಯೆ ಮಾಡಬಾರದು ಎಂದು ಆಂಧ್ರ ಪ್ರದೇಶದವರು ಕೇಂದ್ರ ಸರ್ಕಾರಕ್ಕೆ ಆಕ್ಷೇಪಣಾ ಪತ್ರ ಬರೆದಿದ್ದಾರೆ. ಈ ವಿಚಾರವಾಗಿ ಕೇಂದ್ರ ಸರ್ಕಾರ ನಮಗೆ ಪತ್ರ ಬರೆದು ಸ್ಪಷ್ಟನೆ ಕೇಳಿದೆ. ನ್ಯಾಯಾಧೀಕರಣ ಆದೇಶದ ಪ್ರಕಾರ ನಮ್ಮ ಪಾಲಿನ ನೀರಿನ ಬಳಕೆಗೆ ಯೋಜನೆ ಮಾಡುತ್ತಿದ್ದು, ಈಗಾಗಲೇ 26 ಸಾವಿರ ಕೋಟಿ ರೂ. ಮೊತ್ತದ ಕಾಮಗಾರಿಗಳನ್ನು ಆರಂಭಿಸಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : ಭ್ರಮಾಧೀನ ಸಮಾಜ- ಯುವಜನಾಂಗದ ಕನಸು
ನಾವು ಈಗಲೇ ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳ ಮಾಡುತ್ತಿಲ್ಲ. 2010 ರಲ್ಲಿ ಆಗಿರುವ ಆದೇಶದ ಅನುಸಾರ ನಮ್ಮ ಪಾಲಿನ ನೀರನ್ನು ಬಳಕೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಇದಕ್ಕೆ ಆಂಧ್ರಪ್ರದೇಶ ಸರ್ಕಾರ ತಗಾದೆ ತೆಗೆದಿದೆ ಎಂದು ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ.
ಅಲ್ಲದೆ, ತುಂಗಭದ್ರಾ ಅಣೆಕಟ್ಟೆಯಿಂದ ನಮಗೆ 30 ಟಿಎಂಸಿ ನೀರು ವ್ಯರ್ಥವಾಗುತ್ತಿದ್ದು, ಇದಕ್ಕೆ ಪರ್ಯಾಯ ಮಾರ್ಗ ಕಂಡುಕೊಳ್ಳಲು ಆಂಧ್ರ ಸರಕಾರ ನಮಗೆ ಸಹಕಾರ ನೀಡುತ್ತಿಲ್ಲ. ಈ ಎಲ್ಲಾ ವಿಚಾರಗಳ ಬಗ್ಗೆ ನಮ್ಮ ಸಂಸದರ ಜತೆ ಚರ್ಚೆ ಮಾಡಿ, ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಲು ನಾನು, ಸಚಿವರಾದ ಹೆಚ್.ಕೆ ಪಾಟೀಲ್, ಎಂ.ಬಿ. ಪಾಟೀಲ್, ಬೋಸರಾಜು ಮಂಗಳವಾರ ದೆಹಲಿಗೆ ಹೋಗುತ್ತಿದ್ದೇವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.






