ನವದೆಹಲಿ: ಈ ಬಾರಿಯ ಸಂಸತ್ ಚಳಿಗಾಲದ ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದೆ. ಈ ಬಗ್ಗೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮಾಹಿತಿ ನೀಡಿದ್ದಾರೆ. 2025ರ ಡಿಸೆಂಬರ್ 1ರಿಂದ ಡಿಸೆಂಬರ್ 19ರವರೆಗೆ ಸಂಸತ್ ಚಳಿಗಾಲದ ಅಧಿವೇಶನ ನಡೆಯಲಿದೆ.

ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಡಿಸೆಂಬರ್ 1, 2025 ರಿಂದ ಡಿಸೆಂಬರ್ 19, 2025 ರವರೆಗೆ (ಸಂಸದೀಯ ವ್ಯವಹಾರಗಳ ಅಗತ್ಯಗಳಿಗೆ ಒಳಪಟ್ಟು) ಸಂಸತ್ತಿನ ಚಳಿಗಾಲದ ಅಧಿವೇಶನವನ್ನು ಕರೆಯುವ ಸರ್ಕಾರದ ಪ್ರಸ್ತಾಪವನ್ನು ಅನುಮೋದಿಸಿದ್ದಾರೆ ಎಂದು ತಿಳಿಸಿದ್ದಾರೆ.

ಅಲ್ಲದೇ ಈ ಬಾರಿ ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸುವ ಮತ್ತು ಜನರ ಆಕಾಂಕ್ಷೆಗಳನ್ನು ಪೂರೈಸುವ ರಚನಾತ್ಮಕ ಮತ್ತು ಅರ್ಥಪೂರ್ಣ ಅಧಿವೇಶನವನ್ನು ಎದುರು ನೋಡುತ್ತಿದ್ದೇನೆ ಎಂದು ಕಿರಣ್ ರಿಜಿಜು ಬರೆದುಕೊಂಡಿದ್ದಾರೆ. ಬಿಹಾರದ ವಿಧಾನಸಭಾ ಚುನಾವಣಾ ಫಲಿತಾಂಶ, ಮತಗಳ್ಳತನ ಆರೋಪ ಸೇರಿದಂತೆ ಕೆಲ ಮಹತ್ವದ ವಿಚಾರಗಳು ಈ ಬಾರಿ ಸಂಸತ್ ಚಳಿಗಾಲದ ಅಧಿವೇಶನದಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ.











