ಬೆಂಗಳೂರು: ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳ ಅವಾಂತರಕ್ಕೆ ಮತ್ತೊಂದು ಜೀವ ಬಲಿಯಾಗಿದ್ದು, ಮಗಳನ್ನು ಕಾಲೇಜಿಗೆ ಬಿಡಲು ಬಂದ ತಾಯಿಯೊಬ್ಬರು ರಸ್ತೆ ಗುಂಡಿಯಿಂದಾಗಿ ಆಯತಪ್ಪಿ ಬಿದ್ದು ಸಾವನ್ನಪ್ಪಿದ್ದಾರೆ. ಕಾಂತ ಮೃತ ಮಹಿಳೆ ಎಂದು ಗುರುತಿಸಲಾಗಿದೆ.

ಕಾಂತ ಇಂದು ಬೆಳಗ್ಗೆ ತಮ್ಮ ಮಗಳು ನೇಹಾ ಅವರನ್ನು ಕಾಲೇಜಿಗೆ ಬಿಡಲು ಮರತ್ತಹಳ್ಳಿಯಿಂದ ಸಿದ್ದಾಪುರದ ಕಡೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ರಸ್ತೆಯಲ್ಲಿದ್ದ ಗುಂಡಿಯನ್ನು ತಪ್ಪಿಸಲು ಯತ್ನಿಸಿದಾಗ ಆಯತಪ್ಪಿ ಬಿದ್ದಿದ್ದಾರೆ. ಈ ವೇಳೆ ಹಿಂಬದಿಯಿಂದ ಬಂದ ಶಾಲಾ ಬಸ್ ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವೈಟ್‌ಫೀಲ್ಡ್ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಕಳೆದ ರಾತ್ರಿ ಸುರಿದ ಮಳೆಯಿಂದಾಗಿ ರಸ್ತೆಯ ಗುಂಡಿಗಳು ನೀರಿನಿಂದ ತುಂಬಿಕೊಂಡಿದ್ದವು. ಇದರಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಬಿಬಿಎಂಪಿಯ ನಿರ್ಲಕ್ಷ್ಯ ಹಾಗೂ ಕಳಪೆ ರಸ್ತೆ ಕಾಮಗಾರಿಗಳೇ ಇಂತಹ ದುರಂತಗಳಿಗೆ ಕಾರಣ ಎಂದು ಸರ್ಕಾರ ಹಾಗೂ ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ.







