ಬೆಂಗಳೂರು : ಇಂಡಿ ಮತಕ್ಷೇತ್ರದ ಶಾಸಕ ಯಶವಂತರಾಯಗೌಡ ವಿ. ಪಾಟೀಲ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸದೆ ಕಡೆಗಣಿಸಿರುವುದನ್ನು ವಿರೋಧಿಸಿ ಅವರು ವಿಧಾನಸಭೆ ಸಭಾಧ್ಯಕ್ಷರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ.

ರಾಜ್ಯದಲ್ಲಿ ತೀವ್ರ ಮುಂಗಾರು ಮಳೆಯ ಕೊರತೆಯಿಂದ ಬೆಳೆಗಳು ಸಂಪೂರ್ಣ ಒಣಗಿಹೋಗಿದ್ದು, ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಭೀಕರ ಸಮಸ್ಯೆ ಎದುರಾಗಿದೆ. ಈ ಸಂಬಂಧ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ, ಇಂಡಿ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಕೋರಲಾಗಿತ್ತು. ಆದರೆ, ಜಿಲ್ಲೆಯ ಒಟ್ಟು 13 ತಾಲೂಕುಗಳ ಪೈಕಿ ಇಂಡಿ ಮತ್ತು ಚಡಚಣ ತಾಲೂಕುಗಳನ್ನು ಹೊರತುಪಡಿಸಿ ಉಳಿದ ಪ್ರದೇಶಗಳನ್ನು ಹಾಗೂ ರಾಜ್ಯದ ಒಟ್ಟು 188 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ ಎಂದು ಶಾಸಕರು ಪತ್ರದಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ತಾವು ಆಡಳಿತ ಪಕ್ಷದ ಶಾಸಕರಾಗಿದ್ದರೂ ಸರ್ಕಾರಕ್ಕೆ ಮುಜುಗರವಾಗದಂತೆ ನಡೆದುಕೊಂಡಿದ್ದು, ಹಲವು ಬಾರಿ ಮನವಿ ಮಾಡಿದರೂ ತಮ್ಮ ಮಾತಿಗೂ ಭಾವನೆಗಳಿಗೂ ಸರ್ಕಾರದಲ್ಲಿ ಬೆಲೆ ಸಿಕ್ಕಿಲ್ಲ ಎಂದು ಅವರು ಅಸಮಾಧಾನ ಹೊರಹಾಕಿದ್ದಾರೆ. ಪ್ರಸ್ತುತ ರಾಜಕೀಯ ವಾತಾವರಣದಲ್ಲಿ ಬಲಾಢ್ಯರಿಗೆ ಹಾಗೂ ಒತ್ತಡ ತಂತ್ರಗಳನ್ನು ಬಳಸುವವರಿಗೆ ಮಾತ್ರ ಮನ್ನಣೆ ಸಿಗುತ್ತಿದ್ದು, ಸೌಮ್ಯ ಸ್ವಭಾವದವರ ಕೆಲಸಗಳಿಗೆ ಬೆಲೆ ಇಲ್ಲದಂತಾಗಿದೆ ಎಂದು ತಮ್ಮ ಪತ್ರದಲ್ಲಿ ನೇರವಾಗಿ ಉಲ್ಲೇಖಿಸಿದ್ದಾರೆ.

ತಮ್ಮ ಕ್ಷೇತ್ರದ ಜನರ ಆಶೋತ್ತರಗಳಿಗೆ ಹಾಗೂ ಸಂಕಷ್ಟಗಳಿಗೆ ಸ್ಪಂದಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ, ಸ್ವ-ಇಚ್ಛೆಯಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿರುವ ಅವರು, ರಾಜೀನಾಮೆಯನ್ನು ತಕ್ಷಣವೇ ಅಂಗೀಕರಿಸುವಂತೆ ಸ್ಪೀಕರ್‌ಗೆ ವಿನಂತಿಸಿದ್ದಾರೆ.







