ಭಾಷಾಧಾರತೆಯ ಮೇಲೆ ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿಭಾಗಗಳ ವಿಚಾರ ಪದೇ ಪದೇ ಚರ್ಚೆಗೊಳಗಾಗುತ್ತಿದ್ದು, ಇದೀಗ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಹೇಳಿಕೆ ಕನ್ನಡಿಗರನ್ನು ಕೆರಳಿಸಿದೆ. ಈ ಸಂಬಂಧ ಕರ್ನಾಟಕದ ಮುಖ್ಯಮಂತ್ರಿ ಸಿಎಂ ಯಡಿಯೂರಪ್ಪ ಠಾಕ್ರೆ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಮರಾಠಿ ಭಾಷೆ ಮತ್ತು ಸಂಸ್ಕೃತಿ ಪ್ರಧಾನ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವಂತೆ ಮಾತನಾಡಿರುವುದು ಅವರ ಉದ್ಧಟತನ ಪ್ರದರ್ಶನವಾಗಿದೆ. ಇದು ಭಾರತೀಯ ಒಕ್ಕೂಟ ತತ್ವದ ವಿರುದ್ಧವಾದ ನಿಲುವಾಗಿದೆ. ಮಹಾಜನ್ ವರದಿಯೇ ಅಂತಿಮ ಎಂಬುದು ಎಲ್ಲರಿಗೂ ಗೊತ್ತಿರುವ ಸತ್ಯ ಎಂದು ಮತ್ತೊಮ್ಮೆ ಮಹಾರಾಷ್ಟ್ರದ ಸಿಎಂಗೆ ಎಚ್ಚರಿಸಿದ್ದಾರೆ.
ಹೀಗಿರುವಾಗ ಪ್ರಾದೇಶಿಕತೆ ಪ್ರದರ್ಶನ ಮತ್ತು ಭಾಷಾಂಧತೆಯ ಮಾತುಗಳು ದೇಶದ ಏಕತೆಗೆ ಮಾರಕವಾಗಿವೆ. ಇದನ್ನು ನಾನು ಖಂಡಿಸುತ್ತೇನೆ. ಕರ್ನಾಟಕದಲ್ಲಿ ಮರಾಠಿಗರು ಕನ್ನಡಿಗರೊಂದಿಗೆ ಬೆರೆತಿದ್ದಾರೆ, ಅದೇ ರೀತಿ ಮಹಾರಾಷ್ಟ್ರದ ಗಡಿ ಜಿಲ್ಲೆಗಳಲ್ಲಿರುವ ಕನ್ನಡಿಗರು ಮರಾಠಿಗರೊಂದಿಗೆ ಬೆರೆತಿದ್ದಾರೆ ಇದೀಗ ಭಾಷಾ ಆಧಾರದ ಮೇಲೆ ಬೇರ್ಪಡಿಸುವಂತ ಹೇಳಿಕೆ ಸರಿಯಲ್ಲ ಎಂದಿದ್ದಾರೆ.
ಈ ಸೌಹಾರ್ದಯುತ ವಾತಾವರಣವನ್ನು ಕೆಡಿಸುವ ಪ್ರಯತ್ನ ಮಹಾರಾಷ್ಟ್ರದ ಮುಖ್ಯಮಂತ್ರಿಗಳಿಂದ ಆಗುತ್ತಿರುವುದು ನೋವಿನ ಸಂಗತಿ. ಒಬ್ಬ ಭಾರತೀಯನಾಗಿ ಉದ್ಧವ್ ಠಾಕ್ರೆ ಅವರು ಒಕ್ಕೂಟ ತತ್ವವನ್ನು ಗೌರವಿಸುವ ಬದ್ಧತೆಯನ್ನು ತೋರಲಿ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಶಿಕ್ಷಣ ಸಚಿವ ಸುರೇಶ್ಕುಮಾರ್ ಕೂಡ ಪ್ರತಿಕ್ರಿಯಿಸಿದ್ದಾರೆ. ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕರೋನಾ ವಿಚಾರ ಮತ್ತು ರಾಜ್ಯದ ಅಭಿವೃದ್ಧಿ ಕುರಿತು ಹೆಚ್ಚು ಗಮನಹರಿಸಲಿ, ಅದು ಬಿಟ್ಟು ಈಗಾಗಲೆ ಇತ್ಯಾರ್ಥವಾಗಿರುವ ಕರ್ನಾಟಕ ಮತ್ತು ಮಹಾರಾಷ್ಟ್ರದ ಗಡಿವಿಚಾರದ ಬಗ್ಗೆ ಕೆದುಕುವುದು ಸರಿಯಲ್ಲ, ಇಲ್ಲಿ ಜನರ ಭಾವನೆಯನ್ನು ಕೆದುಕುವುದರಿಂದ ಯಾವುದೇ ಪ್ರಯೋಜನವಿಲ್ಲ, ರಾಜಕೀಯ ಲಾಭಕೋಸ್ಕರ ಗಡಿ ವಿಚಾರವನ್ನು ಕೆದುಕಿದ್ದಾರೆಂದು ಎಂದು ಪಿಟಿಐ ಸುದ್ದಿಸಂಸ್ಥೆಯೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ.
ಮರಾಠಿ ಮಾತನಾಡುವ ಜನರು ಕರ್ನಾಟಕದ ಗಡಿ ಜಿಲ್ಲೆಗಳಾದ ಬೆಳಗಾವಿ, ನಿಪ್ಪಾಣಿ, ಕಾರ್ವಾರ ಸೇರಿದಂತೆ ಇತರೆ ಪ್ರದೇಶದಲ್ಲಿ ಹೆಚ್ಚಿದ್ದು, ಅಂತಹ ಪ್ರದೇಶಗಳನ್ನು ಮಹಾರಾಷ್ಟ್ರ ಸರ್ಕಾರ ಸೇರಿಸಿಕೊಳ್ಳಲು ಬದ್ಧವಾಗಿದೆ ಎಂಬ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿಕೆ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ.