ಎಸ್‌ಎಸ್‌ಎಲ್‌ಸಿ ಪರೀಕ್ಷಾ ದಿನಾಂಕ ಶಿಕ್ಷಣ ಇಲಾಖೆಯಿಂದ ಪ್ರಕಟಗೊಂಡಿದೆ. ಕರೋನಾ ಲಾಕ್‌ಡೌನ್ ಹಿನ್ನಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಈ ಕುರಿತು ಶಿಕ್ಷಣ ಸಚಿವ ಸುರೇಶ್ ಕುಮಾರ್ ಫೇಸ್‌ಬುಕ್ ಲೈವ್ ಬಂದು ಪರೀಕ್ಷೆಗಳ ವೇಳಾಪಟ್ಟಿ ಹಾಗೂ ಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸಿದ್ದಾರೆ.
ಜೂನ್ 25ರಿಂದ ಜುಲೈ 4ರ ವರೆಗೆ ಪರೀಕ್ಷೆ ನಡೆಯಲಿದ್ದು, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಸ್ಯಾನಿಟೈಸರ್ ಮತ್ತು ಮಾಸ್ಕ್ ನೀಡಲಾಗುವುದು. 43,720 ಕೊಠಡಿಗಳನ್ನು ಹೊಂದಿದ 2,879 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಒಟ್ಟು 8,48,196 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆಯಲಿದ್ದಾರೆ.
ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಎಸ್‌ಎಸ್‌ಎಲ್‌ಸಿಯ ಇಂಗ್ಲಿಷ್, ಗಣಿತ , ವಿಜ್ಞಾನ ಮತ್ತು ಸಮಾಜ ವಿಜ್ಞಾನ ಪರೀಕ್ಷೆಗಳ ನಡುವೆ ಒಂದೊಂದು ದಿನದ ಅಂತರವಿರಲಿದೆ. ಒಟ್ಟಾರೆ ಎಲ್ಲಾ ಪರೀಕ್ಷೆಗಳು 10 ದಿನಗಳಲ್ಲಿ ಮುಗಿಯಲಿದೆ.
ಡಿಡಿ ಚಂದನ ವಾಹಿನಿಯ ಮೂಲಕ ಪರೀಕ್ಷೆಗೆ ಪೂರಕವಾದ ತರಗತಿಗಳನ್ನು ಶಿಕ್ಷಣ ಇಲಾಖೆಯಿಂದ ಈಗಾಗಲೇ ನೀಡಲಾಗುತ್ತಿದೆ. ವಿಷಯವಾರು ವೇಳಾಪಟ್ಟಿಯನ್ನು ಕೆಲವೇ ದಿನಗಳಲ್ಲಿ ಬಿಡಗಡೆಗೊಳಿಸಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಆರೋಗ್ಯ ಇಲಾಖೆಯ ಅಧಿಕಾರಿಗಳ ಸಲಹೆ ಪಡೆದು ಪ್ರತಿ ಸಭಾಂಗಣದಲ್ಲಿ ವಿದ್ಯಾರ್ಥಿಗಳ ನಡುವೆ ಅಂತರ ಕಾಯ್ದುಕೊಳ್ಳುವ ವ್ಯವಸ್ಥೆ ಮಾಡುತ್ತೇವೆ. ಪ್ರತಿ ವಿದ್ಯಾರ್ಥಿ ಮಾಸ್ಕ್ ಕಡ್ಡಾಯ ಮಾಡುತ್ತಿದ್ದೇವೆ. ಇದಕ್ಕಾಗಿ ಭಾರತ್ ಸ್ಕೌಟ್ ಮತ್ತು ಗೈಡ್ಸ್ ನಿಂದ ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಮಾಸ್ಕ್ ನೀಡಲಿದ್ದಾರೆ. ಶಿವನ ಹಳ್ಳಿ ರಾಮಕೃಷ್ಣ ಮಿಷನ್ ನಿಂದ 2 ಲಕ್ಷ ಮಾಸ್ಕ್ ಬೆಂಗಳೂರು ದಕ್ಷಿಣ, ರಾಮನಗರಕ್ಕೆ ನೀಡಲಿದ್ದಾರೆ. ಒಬ್ಬೊಬ್ಬ ವಿದ್ಯಾರ್ಥಿಗೆ ಎರಡು ಮಾಸ್ಕ್ ಸಿಗಲಿದೆ ಎಂದರು. ಪರೀಕ್ಷಾ ಕೇಂದ್ರಕ್ಕೆ ಬಂದ ವಿದ್ಯಾರ್ಥಿಗಳಿಗೆ ಆರೋಗ್ಯ ಸಮಸ್ಯೆ ಇದ್ದರೆ ಬೇರೆ ಕಡೆ ಪರೀಕ್ಷೆ ಬರೆಯಲು ಅವಕಾಶ ಮಾಡುತ್ತೇವೆ. ಪರೀಕ್ಷೆ ಆರಂಭಕ್ಕೂ ಮೊದಲು ಎಲ್ಲಾ ಕೊಠಡಿಗಳನ್ನು ಸ್ಯಾನಿಟೈಸ್ ಮಾಡುತ್ತೇವೆ ಎಂದು ಶಿಕ್ಷಣ ಸಚಿವರು ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.